ಬೆಂಗಳೂರು, ಜುಲೈ 18: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉತ್ತರ ತಾಲೂಕು ಮಾರಪ್ಪನಪಾಳ್ಯದಲ್ಲಿ 20 ವರ್ಷದ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ನಡೆದ ಮೂರು ದಿನಗಳ ಬಳಿಕ ಕೊಠಡಿಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ಕುಟುಂಬಸ್ಥರಿಗೆ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿಯನ್ನು ಉದಯ್ (20) ಎಂದು ಗುರುತಿಸಲಾಗಿದೆ. ಉದಯ್ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದು, ವಿದ್ಯಾಭ್ಯಾಸದ ಜೊತೆಗೆ ನಗರದ ಬಾಟಾ ಶೋರೂಂನಲ್ಲಿ ಪಾರ್ಟ್‌ಟೈಂ ಉದ್ಯೋಗವನ್ನೂ ಮಾಡುತ್ತಿದ್ದ.
ಉದಯ್ ಅವರ ಓದಿಗೆ ಅನುಕೂಲವಾಗುವಂತೆ ಪೋಷಕರಾದ ಸುರೇಶ್ ಮತ್ತು ಪ್ರೇಮಲತಾ ದಂಪತಿ ಮನೆಯ ಮೇಲ್ಭಾಗದಲ್ಲಿ ಪ್ರತ್ಯೇಕ ಕೊಠಡಿಯನ್ನು ನಿರ್ಮಿಸಿಕೊಟ್ಟಿದ್ದರು. ಇದೇ ಕೊಠಡಿಯಲ್ಲಿ ಉದಯ್ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಘಟನೆ ನಡೆದ ಬಳಿಕ ಸುಮಾರು ಮೂರು ದಿನಗಳವರೆಗೆ ಮನೆಯವರಿಗೆ ಯಾವುದೇ ಅನುಮಾನ ಬಂದಿರಲಿಲ್ಲ. ಬಳಿಕ ಕೊಠಡಿಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಕುಟುಂಬಸ್ಥರು ಬಾಗಿಲು ತೆರೆದು ನೋಡಿದಾಗ ವಿದ್ಯಾರ್ಥಿ ಉದಯ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ದೃಶ್ಯ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಪ್ರಾಥಮಿಕ ಮಾಹಿತಿಯ ಪ್ರಕಾರ, ಉದಯ್ ಆನ್‌ಲೈನ್ ಗೇಮಿಂಗ್ ಚಟಕ್ಕೆ ಒಳಗಾಗಿದ್ದ ಎನ್ನಲಾಗುತ್ತಿದೆ. ಆದರೆ ಇದೇ ಆತ್ಮಹತ್ಯೆಗೆ ಕಾರಣವೇ ಅಥವಾ ಬೇರೆ ಯಾವುದೇ ವೈಯಕ್ತಿಕ ಅಥವಾ ಮಾನಸಿಕ ಒತ್ತಡ ಇದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆತ್ಮಹತ್ಯೆಯ ನಿಖರ ಕಾರಣ ಪೊಲೀಸ್ ತನಿಖೆಯ ಬಳಿಕವೇ ತಿಳಿಯಬೇಕಿದೆ.
ಮಾಹಿತಿ ತಿಳಿದ ತಕ್ಷಣ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಶವಗಾರಕ್ಕೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಮೃತನ ಮೊಬೈಲ್ ಹಾಗೂ ಇತರೆ ಮಾಹಿತಿಗಳನ್ನು ಪರಿಶೀಲಿಸುವ ಮೂಲಕ ಆತ್ಮಹತ್ಯೆಯ ಹಿಂದಿನ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.
ಯುವಕರಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡ, ಆನ್‌ಲೈನ್ ಗೇಮಿಂಗ್ ವ್ಯಸನ ಹಾಗೂ ವೈಯಕ್ತಿಕ ಸಮಸ್ಯೆಗಳು ಆತ್ಮಹತ್ಯೆಯಂತಹ ದುರ್ಘಟನೆಗಳಿಗೆ ಕಾರಣವಾಗುತ್ತಿರುವ ಬಗ್ಗೆ ಈಗ ಆತಂಕ ವ್ಯಕ್ತವಾಗುತ್ತಿದೆ. ಈ ಘಟನೆಯೂ ಅಂತಹ ಹಲವು ಪ್ರಶ್ನೆಗಳನ್ನು ಮತ್ತೆ ಮುಂದಿಟ್ಟಿದೆ.
