ಆರ್‌ಸಿಬಿ ಕಾಲ್ತುಳಿತ: ಹೈಕೋರ್ಟ್ ಆದೇಶದಿಂದ ಸಿಐಡಿಗೆ ಹಿನ್ನಡೆ, ಆರೋಪಿಗಳು ಪರಪ್ಪನ ಅಗ್ರಹಾರಕ್ಕೆ

ಅಮಾನತು ವಿರುದ್ಧ ಸಿಎಟಿಗೆ ಅರ್ಜಿ ಸಲ್ಲಿಸಿದ ಐಪಿಎಸ್ ಅಧಿಕಾರಿ, ರಾಜ್ಯ ಸರ್ಕಾರಕ್ಕೆ ನೋಟಿಸ್!

0 (10)

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಜೂನ್ 4ರಂದು ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ (CID) ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಸಿಐಡಿ ಅಧಿಕಾರಿಗಳು ಬಂಧಿಸಿದ್ದ ನಾಲ್ವರು ಆರೋಪಿಗಳನ್ನು 1ನೇ ಎಸಿಜೆಎಂ ಕೋರ್ಟ್‌ನಲ್ಲಿ ಹಾಜರುಪಡಿಸಿದ್ದರೂ, ಕಸ್ಟಡಿಗೆ ಕೋರಿದ ಅರ್ಜಿಯನ್ನು ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ವಾಪಸ್ ಪಡೆಯಲಾಗಿದೆ. ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

ಕೋರ್ಟ್‌ನಲ್ಲಿ ಸಿಐಡಿಗೆ ಹಿನ್ನಡೆ

ಸಿಐಡಿ ಅಧಿಕಾರಿಗಳು ಇಂದು (ಜೂನ್ 10) ಆರೋಪಿಗಳಾದ ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ನ ಸುನಿಲ್ ಮ್ಯಾಥ್ಯೂ, ಕಿರಣ್ ಕುಮಾರ್, ಮತ್ತು ಶಮಂತ್ ಎಸ್.ಪಿ. ಅವರನ್ನು 1ನೇ ಎಸಿಜೆಎಂ ಕೋರ್ಟ್‌ಗೆ ಹಾಜರುಪಡಿಸಿ, ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರಿದ್ದರು. ಆದರೆ, ಆರೋಪಿಗಳ ವಕೀಲರು ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಉಲ್ಲೇಖಿಸಿದರು. ಹೈಕೋರ್ಟ್‌ನಲ್ಲಿ ಬಾಕಿಯಿರುವ ಅರ್ಜಿಯ ಇತ್ಯರ್ಥದವರೆಗೆ ಸಿಐಡಿ ಕಸ್ಟಡಿಗೆ ಕೋರಬಾರದು ಎಂದು ಹೈಕೋರ್ಟ್ ಸೂಚಿಸಿರುವುದರಿಂದ, ಸಿಐಡಿ ತನ್ನ ಅರ್ಜಿಯನ್ನು ವಾಪಸ್ ಪಡೆಯಿತು. ಇದರಿಂದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಯಿತು.

ಐಪಿಎಸ್ ಅಧಿಕಾರಿಯಿಂದ ಸಿಎಟಿಗೆ ಅರ್ಜಿ

ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇಲೆ ರಾಜ್ಯ ಸರ್ಕಾರವು ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ವಿಕಾಸ್ ಕುಮಾರ್ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (CAT)ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ನಡೆದ ವಿಚಾರಣೆಯಲ್ಲಿ, ಹೆಚ್ಚುವರಿ ಎಜಿಯವರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದು, ಸಿಎಟಿಯು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜೂನ್ 12ಕ್ಕೆ ಮುಂದೂಡಿದೆ.

Exit mobile version