ಕಾಲ್ತುಳಿತ ಪ್ರಕರಣ: ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಮಧ್ಯಂತರ ಜಾಮೀನು

1425 (6)

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 3ರಂದು ನಡೆದ ದುರಂತ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್, ಮತ್ತು ಶಮಂತ್ ಮಾವಿನಕೆರೆ ಅವರು ತಮ್ಮ ಪಾಸ್‌ಪೋರ್ಟ್‌ಗಳನ್ನು ಕೋರ್ಟ್‌ಗೆ ನೀಡುವ ಷರತ್ತಿನೊಂದಿಗೆ ನ್ಯಾಯಮೂರ್ತಿ ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಮದ್ಯಂತರ ಜಾಮೀನು ನೀಡಿ ಆದೇಶಿಸಿದೆ.

ಆರ್‌ಸಿಬಿಯ ಗೆಲುವನ್ನು ಸಂಭ್ರಮಿಸಲು ಜೂನ್ 3ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ವೀಕ್ಷಿಸಲು ಲಕ್ಷಾಂತರ ಅಭಿಮಾನಿಗಳು ಕ್ರೀಡಾಂಗಣದ ಸುತ್ತಮುತ್ತ ಜಮಾಯಿಸಿದ್ದರು. ಆದರೆ, ಗುಂಪಿನ ಅವ್ಯವಸ್ಥೆಯಿಂದ ಕಾಲ್ತುಳಿತ ಸಂಭವಿಸಿ 11 ಮಂದಿ ದುರಂತವಾಗಿ ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಆರ್‌ಸಿಬಿ ಮಾರ್ಕೆಟಿಂಗ್ ತಂಡದ ನಿಖಿಲ್ ಸೋಸಲೆ, ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ನ ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್, ಮತ್ತು ಶಮಂತ್ ಮಾವಿನಕೆರೆ ಅವರನ್ನು ಪೊಲೀಸರು ಬಂಧಿಸಿದ್ದರು.

ಆರೋಪಿಗಳ ಪರ ವಕೀಲ ಸಂದೇಶ್ ಚೌಟ ಅವರು, ಸಿಸಿಬಿ ಪೊಲೀಸರು ಕಾನೂನುಬಾಹಿರವಾಗಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವಾದಿಸಿದರು. ತನಿಖೆಯನ್ನು ಸಿಐಡಿಗೆ ವರ್ಗಾಯಿಸಿದ ನಂತರ ಸಿಸಿಬಿಗೆ ಬಂಧನದ ಅಧಿಕಾರವಿರಲಿಲ್ಲ ಎಂದು ಅವರು ತಿಳಿಸಿದರು. ಜೊತೆಗೆ, ಮುಖ್ಯಮಂತ್ರಿಯವರು ಸುದ್ದಿಗೋಷ್ಠಿಯಲ್ಲಿ ಬಂಧನಕ್ಕೆ ಸೂಚನೆ ನೀಡಿದ್ದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು.

ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಆರೋಪಿಗಳು ಬೆಂಗಳೂರು ತೊರೆಯುವ ವೇಳೆ ಬಂಧಿಸಲಾಗಿದ್ದು, 11 ಅಮಾಯಕರ ಸಾವಿನ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ವಾದಿಸಿದರು. ಆದರೆ, ಆರ್‌ಸಿಬಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ಈ ಘಟನೆಯಲ್ಲಿ ಗಾಯಗೊಳಿಸುವ ಅಥವಾ ಕೊಲೆಯ ಉದ್ದೇಶವಿರಲಿಲ್ಲ ಎಂದು ತಿಳಿಸಿದರು.

ನ್ಯಾಯಾಲಯವು ಎರಡೂ ಕಡೆಯ ವಾದಗಳನ್ನು ಆಲಿಸಿ, ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿತು. ಆದರೆ, ತಮ್ಮ ಪಾಸ್‌ಪೋರ್ಟ್‌ಗಳನ್ನು ವಶಕ್ಕೆ ನೀಡುವ ಷರತ್ತನ್ನು ವಿಧಿಸಿತು. ಈ ಘಟನೆಯ ತನಿಖೆಯನ್ನು ಸಿಐಡಿ ಮುಂದುವರಿಸಿದ್ದು, ಮುಂದಿನ ವಿಚಾರಣೆಯಲ್ಲಿ ಹೆಚ್ಚಿನ ವಿವರಗಳು ಬಯಲಾಗಲಿವೆ.

Exit mobile version