ರಾಮನಗರ: ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಉದಯಪುರ ಎಕ್ಸ್‌ಪ್ರೆಸ್ ರೈಲಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಗ್ರಾಮದ ಬಳಿ ನಡೆದಿದೆ. ತಕ್ಷಣ ಎಚ್ಚೆತ್ತ ರೈಲ್ವೆ ಸಿಬ್ಬಂದಿಗಳು ರೈಲನ್ನು ನಿಲ್ಲಿಸಿ, ಚನ್ನಪಟ್ಟಣದ ಅಗ್ನಿಶಾಮಕ ದಳದ ಸಹಾಯದಿಂದ ಬೆಂಕಿಯನ್ನು ನಂದಿಸಿದ್ದು, ಭಾರೀ ಅನಾಹುತವೊಂದು ತಪ್ಪಿದೆ.
ಹೌದು, ಚಲಿಸುತ್ತಿದ್ದ ರೈಲಿನ ಇಂಜಿನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿಯ ಕಿಡಿಗಳು ಕಾಣಿಸಿಕೊಂಡವೆ. ರೈಲ್ವೆ ಸಿಬ್ಬಂದಿಗಳು ತಕ್ಷಣ ರೈಲನ್ನು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಿಲ್ಲಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸ್ಥಳಕ್ಕೆ ಚನ್ನಪಟ್ಟಣದ ಅಗ್ನಿಶಾಮಕ ದಳವು ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿತು. ಈ ಘಟನೆಯಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ, ಆದರೆ ಪ್ರಯಾಣಿಕರಲ್ಲಿ ಕೆಲಕಾಲ ಆತಂಕ ಮನೆಮಾಡಿತ್ತು.
ಚನ್ನಪಟ್ಟಣ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಇಲಾಖೆಯು ಈ ಘಟನೆಯ ಕಾರಣವನ್ನು ಕಂಡುಹಿಡಿಯಲು ತನಿಖೆಗೆ ಆದೇಶಿಸಿದೆ. ಸಿಬ್ಬಂದಿಗಳ ಸಮಯಪ್ರಜ್ಞೆ ಮತ್ತು ಅಗ್ನಿಶಾಮಕ ದಳದ ತ್ವರಿತ ಕಾರ್ಯಾಚರಣೆಯಿಂದ ದೊಡ್ಡ ದುರಂತವೊಂದು ತಪ್ಪಿದೆ.