ಬೆಂಗಳೂರು: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಸಂಘಟನೆಯ ವಿಸ್ತರಣೆ ಹಾಗೂ ಸಮಾಜದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಶ್ರೀ ದತ್ತಾ ಸರಾಫ್ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ.
ಬ್ರಾಹ್ಮಣ ಸಮಾಜದ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಉನ್ನತಿಗೆ ನಿರಂತರವಾಗಿ ಶ್ರಮಿಸುತ್ತಿರುವ ಶ್ರೀ ದತ್ತಾ ಸರಾಫ್ ಅವರ ಸೇವಾ ಮನೋಭಾವ, ಸಂಘಟನಾ ಸಾಮರ್ಥ್ಯ ಮತ್ತು ನಾಯಕತ್ವ ಗುಣಗಳನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ. ಅವರ ನೇಮಕದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಸಂಘದ ಚಟುವಟಿಕೆಗಳಿಗೆ ಇನ್ನಷ್ಟು ಬಲ ದೊರೆಯಲಿದೆ ಎಂಬ ವಿಶ್ವಾಸವನ್ನು ಸಂಘದ ರಾಜ್ಯ ನಾಯಕತ್ವ ವ್ಯಕ್ತಪಡಿಸಿದೆ.
ಈ ನೇಮಕ ಕಾರ್ಯಕ್ರಮವು ಗೌರವಯುತವಾಗಿ ನಡೆಯಿದ್ದು, ಈ ಸಂದರ್ಭದಲ್ಲಿ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಜಿ. ಆರ್. ಪ್ರದೀಪ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ವಿಶ್ವನಾಥ ಜೋಶಿ, ಉದ್ಯಮ ವಿಭಾಗದ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀಧರ್, ಯುವ ವಿಭಾಗದ ರಾಜ್ಯಾಧ್ಯಕ್ಷರಾದ ಶ್ರೀ ಕಾರ್ತಿಕ್ ಸೋಮಯಾಜಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಅಧ್ಯಕ್ಷರಾದ ಶ್ರೀಮತಿ ರೀಮಾ, ಹಾಗೂ ಶ್ರೀಮತಿ ಶುಭಾ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಶ್ರೀ ಜಿ. ಆರ್. ಪ್ರದೀಪ್ ಅವರು, “ಸಂಘದ ಬಲವು ಶಿಸ್ತಿನ ಸಂಘಟನೆ ಮತ್ತು ನಿಷ್ಠಾವಂತ ನಾಯಕತ್ವದಲ್ಲಿದೆ. ಶ್ರೀ ದತ್ತಾ ಸರಾಫ್ ಅವರ ನೇಮಕದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಂಘಟನೆ ಮತ್ತಷ್ಟು ಬಲಗೊಳ್ಳಲಿದೆ” ಎಂದು ಅಭಿಪ್ರಾಯಪಟ್ಟರು. ಈ ನೇಮಕ ಕಾರ್ಯಕ್ರಮವು ಸಂಘದ ಪದಾಧಿಕಾರಿಗಳು, ಸಮಾಜದ ಗಣ್ಯರು ಹಾಗೂ ಕಾರ್ಯಕರ್ತರ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ನೆರವೇರಿತು.
