ದೀಪಾವಳಿ ಜಾತ್ರೆಗೆ ಮಹದೇಶ್ವರ ಬೆಟ್ಟ ಸಜ್ಜು: ನ.6ರಿಂದ ವಾಹನ ಸಂಚಾರ ನಿರ್ಬಂಧ!

Untitled design (10)

ಚಾಮರಾಜನಗರ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆಯ ಸಂಭ್ರಮ ಮನೆಮಾಡಿದೆ. ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಜಿಲ್ಲಾಡಳಿತ ಹಾಗೂ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಭದ್ರತೆ ಮತ್ತು ಸಂಚಾರ ವ್ಯವಸ್ಥೆಗೆ ವಿಶೇಷ ಕ್ರಮಗಳನ್ನು ಕೈಗೊಂಡಿವೆ. ಇದರ ಭಾಗವಾಗಿ ನವೆಂಬರ್ 6ರಿಂದ 10ರವರೆಗೆ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ದೀಪಾವಳಿ ಜಾತ್ರೆ ಸಂದರ್ಭದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಹಲವರು ಪಾದಯಾತ್ರೆಯ ಮೂಲಕ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದರೆ, ಇನ್ನೂ ಹಲವರು ಬಸ್‌ಗಳಲ್ಲಿ ಪ್ರಯಾಣಿಸುತ್ತಾರೆ. ಹೀಗಾಗಿ ಬೆಟ್ಟದ ಮಾರ್ಗದಲ್ಲಿ ವಾಹನ ದಟ್ಟಣೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಟ್ರಾಫಿಕ್ ಜಾಮ್ ನಿಯಂತ್ರಿಸುವ ಉದ್ದೇಶದಿಂದ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.

ವಾಹನಗಳ ನಿರ್ಬಂಧದ ಹಿನ್ನೆಲೆಯಲ್ಲಿ ಕೌದಳ್ಳಿ ಬಳಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಲ್ಲಿ ಬರುವ ಭಕ್ತರಿಗಾಗಿ ಪ್ರತ್ಯೇಕ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ. ಭಕ್ತರು ತಮ್ಮ ವಾಹನಗಳನ್ನು ನಿಗದಿತ ಸ್ಥಳಗಳಲ್ಲಿ ನಿಲುಗಡೆ ಮಾಡಿ ಸಹಕರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಇನ್ನು ದೀಪಾವಳಿ ಜಾತ್ರೆಗೆ ಆಗಮಿಸುವ ಭಕ್ತರಿಗೆ ಪ್ರಸಾದ ವಿತರಣೆಯಲ್ಲೂ ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತರಿಗಾಗಿ ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಲಾಡುಗಳನ್ನು ತಯಾರಿಸಲಾಗುತ್ತಿದೆ. ಜಾತ್ರೆಯ ಸಂದರ್ಭದಲ್ಲಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ದೇವಸ್ಥಾನದ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಸಿದ್ಧತೆ ನಡೆಸಿವೆ.

ಒಟ್ಟಿನಲ್ಲಿ ದೀಪಾವಳಿ ಜಾತ್ರೆಯ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗುವ ನಿರೀಕ್ಷೆಯಿದ್ದು, ವಾಹನ ಸಂಚಾರ ನಿಯಂತ್ರಣ, ಪಾರ್ಕಿಂಗ್ ವ್ಯವಸ್ಥೆ ಹಾಗೂ ಪ್ರಸಾದ ವಿತರಣೆಗೆ ವಿಶೇಷ ಆದ್ಯತೆ ನೀಡಲಾಗಿದೆ. ನವೆಂಬರ್ 6ರಿಂದ 10ರವರೆಗೆ ವಿಧಿಸಿರುವ ವಾಹನ ನಿರ್ಬಂಧವನ್ನು ಗಮನದಲ್ಲಿಟ್ಟುಕೊಂಡು ಭಕ್ತರು ತಮ್ಮ ಪ್ರಯಾಣವನ್ನು ಯೋಜಿಸುವಂತೆ ಸೂಚಿಸಲಾಗಿದೆ.

Exit mobile version