ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ಕೂಗಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಧ್ವನಿಗೂಡಿಸಿದ್ದಾರೆ. ಜೊತೆಗೆ, ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆ ಕಾಪಾಡಲು ಮೊಬೈಲ್ ಬಳಕೆಯ ಮೇಲೂ ನಿಷೇಧ ಹೇರಬೇಕೆಂದು ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಯದುವೀರ್ ಒಡೆಯರ್, “ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಭಕ್ತರು ಧಾರ್ಮಿಕ ಭಾವನೆಯಿಂದ ಬರಬೇಕು. ಇದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಬೇಕು,” ಎಂದು ಆಗ್ರಹಿಸಿದರು.
ಮುಂದುವರಿದು, “ತಿರುಪತಿಯಂತಹ ಧಾರ್ಮಿಕ ಕ್ಷೇತ್ರಗಳ ಮಾದರಿಯಲ್ಲಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ಬಳಕೆಗೆ ನಿಷೇಧ ಹೇರಬೇಕು. ಇತ್ತೀಚೆಗೆ ಕೆಲವರು ದೇವಿಯ ಮೂಲ ವಿಗ್ರಹದ ವಿಡಿಯೋ ಚಿತ್ರೀಕರಿಸುತ್ತಿದ್ದಾರೆ, ಇದು ಗೊತ್ತಿದ್ದೋ ಗೊತ್ತಿಲ್ಲದೆಯೋ ಆಗುತ್ತಿದೆ. ಇಂಥ ಕೃತ್ಯಗಳು ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುತ್ತವೆ. ಈ ನಿಟ್ಟಿನಲ್ಲಿ ಸೂಕ್ತ ಕಾನೂನು ಜಾರಿಗೊಳಿಸಬೇಕು,” ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದರು.