ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿರುವ ಅಬ್ದುಲ್ ರಹೀಮ್ ಹತ್ಯೆ ಮತ್ತು ಪದೇಪದೇ ಉಂಟಾಗುತ್ತಿರುವ ಕೋಮುಗಲಭೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಜಿಲ್ಲೆಯ ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಆಗಿ ಡಾ.ಅರುಣ್ ಕೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾದ ಕಾರಣದಿಂದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಯತೀಶ್ ಎನ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2008ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಅನುಪಮ್ ಅಗರ್ವಾಲ್ ಅವರನ್ನು ಆರ್ಥಿಕ ಅಪರಾಧಗಳು ಮತ್ತು ಅಪರಾಧ ತನಿಖಾ ಇಲಾಖೆಯ ಡಿಐಜಿ ಹುದ್ದೆಗೆ ವರ್ಗಾಯಿಸಲಾಗಿದೆ. ಇನ್ನು, ಡಾ.ಅರುಣ್ ಕೆ, 2014ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು, ದಕ್ಷಿಣ ಕನ್ನಡದ ಎಸ್‌ಪಿಯಾಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡದ ಜೊತೆಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬಾನ್ಯಾಂಗ್ ಅವರನ್ನೂ ಸರ್ಕಾರ ವರ್ಗಾವಣೆ ಮಾಡಿದೆ. ಇವರ ಸ್ಥಾನಕ್ಕೆ ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯ, ಕ್ರಿಮಿನಲ್ ಇನ್ವೆಸ್ಟಿಗೇಷನ್ ವಿಭಾಗದ ಡಿಐಜಿ ಬೊರಸೆ ಭೂಷಣ್ ಗುಲಾಬ್ರಾವ್ ಅವರನ್ನು ನೇಮಕ ಮಾಡಲಾಗಿದೆ. ಈ ವರ್ಗಾವಣೆಯು ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆಗಳು ಮತ್ತು ಅಬ್ದುಲ್ ರಹೀಮ್ ಹತ್ಯೆಯಂತಹ ಘಟನೆಗಳು ಕಾನೂನು ಸುವ್ಯವಸ್ಥೆಗೆ ಗಂಭೀರ ಸವಾಲು ಒಡ್ಡಿವೆ. ಈ ಘಟನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಆಕ್ರೋಶ ಮತ್ತು ಒತ್ತಡದಿಂದಾಗಿ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಈ ವರ್ಗಾವಣೆ ಆದೇಶವನ್ನು ಹೊರಡಿಸಿದೆ. ನೂತನವಾಗಿ ನೇಮಕಗೊಂಡಿರುವ ಸುಧೀರ್ ಕುಮಾರ್ ರೆಡ್ಡಿ ಮತ್ತು ಡಾ.ಅರುಣ್ ಕೆ ಅವರಿಂದ ಕರಾವಳಿ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕಠಿಣ ಕ್ರಮಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ.