ಲಾವಣ್ಯ ಹ*ತ್ಯೆ ಪ್ರಕರಣ; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಚೇತನ್ ಪೊಲೀಸ್ ವಶಕ್ಕೆ

ಪೊಲೀಸರ (17)

ಮಂಗಳೂರು, (ಜುಲೈ 28): ರಾಜ್ಯದ ಗಮನ ಸೆಳೆದಿದ್ದ ಬಿಸಿ ರೋಡ್ ಲಾವಣ್ಯ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಚೇತನ್ ಚಿಕಿತ್ಸೆ ಪೂರ್ಣಗೊಂಡ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಬಂಟ್ವಾಳ ಪೊಲೀಸರು ಆತನನ್ನು ಅಧಿಕೃತವಾಗಿ ವಶಕ್ಕೆ ಪಡೆದಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರಿಗೆ ನ್ಯಾಯಾಲಯವು ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ನೀಡಿದೆ.

ಲಾವಣ್ಯ ಹತ್ಯೆ ನಡೆದ ಬಳಿಕ ಆರೋಪಿ ಚೇತನ್ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ತಕ್ಷಣವೇ ಆತನನ್ನು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 10 ದಿನಗಳಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದ ಚೇತನ್ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ವೈದ್ಯರು ಡಿಸ್ಚಾರ್ಜ್ ಮಾಡಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಯಾದ ತಕ್ಷಣ ಬಂಟ್ವಾಳ ಪೊಲೀಸರು ಆತನನ್ನು ವಶಕ್ಕೆ ಪಡೆದು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆಗೆ ಹೆಚ್ಚಿನ ಮಾಹಿತಿ ಅಗತ್ಯವಿರುವುದರಿಂದ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದು, ನ್ಯಾಯಾಲಯ ನಾಲ್ಕು ದಿನಗಳ ಕಾಲ ಕಸ್ಟಡಿಗೆ ಅನುಮತಿ ನೀಡಿದೆ.

ಪೊಲೀಸರು ಕಸ್ಟಡಿಗೆ ಪಡೆದ ಕೂಡಲೇ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಸ್ಥಳ ಮಹಜರು (ಸ್ಪಾಟ್ ಪಂಚನಾಮೆ) ಪ್ರಕ್ರಿಯೆ ಆರಂಭಿಸಲಾಗಿದ್ದು, ಆರೋಪಿ ಚೇತನ್‌ನನ್ನು ಕೊಲೆ ನಡೆದ ಸ್ಥಳಕ್ಕೆ ಕರೆದೊಯ್ದು ಘಟನೆ ನಡೆದ ರೀತಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಸ್ಥಳದಲ್ಲಿಯೇ ಆರೋಪಿ ಬಳಿ ಪೊಲೀಸರು ವಿವರವಾದ ವಿಚಾರಣೆ ನಡೆಸಿದ್ದು, ಪ್ರಕರಣದ ಹಲವು ಅಂಶಗಳನ್ನು ಪರಿಶೀಲಿಸುತ್ತಿದ್ದಾರೆ.

ಲಾವಣ್ಯ ಹತ್ಯೆ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಆರೋಪಿಯ ವಿಚಾರಣೆ ಮೂಲಕ ಕೊಲೆಗೆ ಕಾರಣವಾದ ಹಿನ್ನೆಲೆ, ಘಟನೆಯ ನಿಖರ ಸಂದರ್ಭ ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಕಸ್ಟಡಿ ಅವಧಿಯಲ್ಲಿ ಇನ್ನಷ್ಟು ಮಹತ್ವದ ಮಾಹಿತಿ ಹೊರಬರುವ ಸಾಧ್ಯತೆ ಇದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದ ತನಿಖೆಯನ್ನು ಬಂಟ್ವಾಳ ಪೊಲೀಸರು ಮುಂದುವರಿಸಿದ್ದು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಬಿ.ಸಿ. ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜುಲೈ 16, ರಂದು 21 ವರ್ಷದ ಲಾವಣ್ಯ ಎಂಬ ಯುವತಿಯನ್ನು ಚೇತನ್  ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿದ್ದ. ಆಕೆಯನ್ನು ಹತ್ಯೆ ಮಾಡಿದ ಬಳಿಕ ಚೇತನ್ ಇಲಿ ಪಾಕ್ಷಣ ಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದ.

Exit mobile version