ಭಾರೀ ಮಳೆಯ ಎಚ್ಚರಿಕೆ: ದಕ್ಷಿಣ ಕನ್ನಡದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ!

1800

ಮಂಗಳೂರು (ಜುಲೈ 23): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಇಂದು ಜುಲೈ 23ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ ತುರ್ತು ಆದೇಶ ಹೊರಡಿಸಿದ್ದಾರೆ.

ಈ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ (ಪಿಯುಸಿ) ಕಾಲೇಜುಗಳು ಹಾಗೂ ಪಿಯುಸಿ ವಸತಿ ಕಾಲೇಜುಗಳಿಗೆ ಇಂದು ಜುಲೈ 23ರಂದು ರಜೆ ಅನ್ವಯವಾಗಲಿದೆ. ಜಿಲ್ಲೆಯ ಯಾವುದೇ ಶಿಕ್ಷಣ ಸಂಸ್ಥೆಯೂ ತರಗತಿಗಳನ್ನು ನಡೆಸಬಾರದು ಎಂದು ಜಿಲ್ಲಾಡಳಿತ ಸ್ಪಷ್ಟ ಸೂಚನೆ ನೀಡಿದೆ.

ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಸಾರ್ವಜನಿಕರ ಸುರಕ್ಷತೆಗಾಗಿ ಜಿಲ್ಲಾಡಳಿತ ಹಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಪೋಷಕರು ತಮ್ಮ ಮಕ್ಕಳನ್ನು ನದಿಗಳು, ಕೆರೆಗಳು, ತಗ್ಗು ಪ್ರದೇಶಗಳು ಹಾಗೂ ಸಮುದ್ರ ತೀರಗಳಿಗೆ ಹೋಗದಂತೆ ಕಟ್ಟುನಿಟ್ಟಾಗಿ ಗಮನಹರಿಸಬೇಕು ಎಂದು ಸೂಚಿಸಲಾಗಿದೆ. ಇದೇ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ಹಾಗೂ ಸಮುದ್ರ ತೀರಗಳಿಗೆ ಭೇಟಿ ನೀಡದಂತೆ ಮನವಿ ಮಾಡಲಾಗಿದೆ.

ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲೇ ಲಭ್ಯವಿದ್ದು ತುರ್ತು ಪರಿಸ್ಥಿತಿಗೆ ತಕ್ಷಣ ಸ್ಪಂದಿಸುವಂತೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಆದೇಶಿಸಲಾಗಿದೆ.

ಇದಲ್ಲದೆ, ಅಗತ್ಯವಿದ್ದರೆ ಜನರಿಗೆ ಆಶ್ರಯ ಕಲ್ಪಿಸಲು ಪ್ರತಿಯೊಂದು ತಾಲೂಕಿನಲ್ಲೂ ಕಾಳಜಿ ಕೇಂದ್ರಗಳನ್ನು ಸಿದ್ಧ ಸ್ಥಿತಿಯಲ್ಲಿ ಇರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಧಿಕೃತ ಹವಾಮಾನ ಮಾಹಿತಿ ಮತ್ತು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದೆ.

Exit mobile version