ಚಿಕ್ಕಮಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟದಲ್ಲಿ ಭಕ್ತರ ದಂಡೇ ಹರಿದುಬಂದಿದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ದೇವಿರಮ್ಮನ ಆಶೀರ್ವಾದ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಆದರೆ, ಭಕ್ತರ ನಿರೀಕ್ಷೆಗೂ ಮೀರಿದ ಜನಸಂದಣಿಯಿಂದ ಬೆಟ್ಟದಲ್ಲಿ ಸರಣಿ ಅವಘಡಗಳು ಸಂಭವಿಸಿದ್ದು, 20ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಮತ್ತೊಂದೆಡೆ, ಬೆಟ್ಟ ಹತ್ತುವಾಗ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ದೇವಿರಮ್ಮ ಬೆಟ್ಟದಲ್ಲಿ ಭಕ್ತರ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಕಂಬಿ ಮುರಿದುಬಿದ್ದ ಪರಿಣಾಮ ಓರ್ವ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಬೆಟ್ಟದಿಂದ ಗಾಯಾಳುಗಳನ್ನು ಹೊತ್ತು ತಂದು ಆಂಬ್ಯುಲೆನ್ಸ್ ಮೂಲಕ ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನೂಕಾಟದಲ್ಲಿ ಕೇಬಲ್ ತುಂಡಾಗಿ ಅವಘಡ
ದೇವಿರಮ್ಮ ಬೆಟ್ಟದಲ್ಲಿ ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ನೂಕಾಟ ಉಂಟಾಗಿದೆ. ಈ ವೇಳೆ ಬೆಟ್ಟದಲ್ಲಿ ಅಳವಡಿಸಲಾಗಿದ್ದ ಕೇಬಲ್ ತುಂಡಾಗಿ ಓರ್ವ ಬಾಲಕಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಬಾಲಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ದಯಾಮಾ, ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಉಂಟಾದ ನೂಕಾಟದ ವೇಳೆ ಕೇಬಲ್ ತುಂಡಾಗಿದೆ ಎಂದು ತಿಳಿಸಿದ್ದಾರೆ. ಗಾಯಾಳುಗಳಿಗೆ ತಕ್ಷಣ ನೆರವು ಒದಗಿಸುವ ಕಾರ್ಯ ಕೈಗೊಳ್ಳಲಾಗಿದೆ. ಬೆಟ್ಟದಲ್ಲಿ ಭಕ್ತರ ಸುರಕ್ಷತೆ ಮತ್ತು ಜನದಟ್ಟಣೆ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಬೆಟ್ಟ ಹತ್ತುವಾಗ ಹೃದಯಾಘಾತ: ವ್ಯಕ್ತಿ ಸಾವು
ದೇವಿರಮ್ಮ ಬೆಟ್ಟದಲ್ಲಿ ಸಂಭವಿಸಿದ ಮತ್ತೊಂದು ದುರಂತದಲ್ಲಿ ಬೆಟ್ಟ ಹತ್ತುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮಣ್ (35) ಮೃತ ದುರ್ದೈವಿ. ಈ ಹಿಂದೆ ಅವರಿಗೆ ಹೃದಯಾಘಾತವಾಗಿದ್ದು, ಬೈಪಾಸ್ ಶಸ್ತ್ರಚಿಕಿತ್ಸೆಯನ್ನೂ ಮಾಡಿಸಿಕೊಂಡಿದ್ದರು ಎನ್ನಲಾಗಿದೆ.
ದೇವಿರಮ್ಮನ ದರ್ಶನಕ್ಕಾಗಿ ಬೆಟ್ಟ ಹತ್ತುತ್ತಿದ್ದ ಸಂದರ್ಭದಲ್ಲಿ ಹವಾಮಾನ ವೈಪರೀತ್ಯದಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡು ಲಕ್ಷ್ಮಣ್ ಕುಸಿದುಬಿದ್ದಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತದೇಹವನ್ನು ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದೇವಿರಮ್ಮ ದರ್ಶನಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು
ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇವಿರಮ್ಮ ಬೆಟ್ಟದಲ್ಲಿ ವಿಶೇಷ ಧಾರ್ಮಿಕ ಸಂಭ್ರಮ ಮನೆಮಾಡಿದೆ. ವರ್ಷಕ್ಕೊಮ್ಮೆ ಮಾತ್ರ ದೇವಿಯ ದರ್ಶನಕ್ಕೆ ಅವಕಾಶ ಇರುವುದರಿಂದ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಈ ಬಾರಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ಇಂದು ದೇವಿರಮ್ಮನ ದರ್ಶನಕ್ಕೆ ಕೊನೆಯ ದಿನವಾಗಿರುವುದರಿಂದ ಹಿಂದಿನ ದಿನಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬೆಟ್ಟದತ್ತ ಹೆಜ್ಜೆ ಹಾಕಿದ್ದಾರೆ. ಹಸಿರು ಸಿರಿಯ ನಡುವೆ ಕಡಿದಾದ ಬೆಟ್ಟದ ಹಾದಿಯನ್ನು ಏರುತ್ತಾ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ.
ಗಾಯಾಳುಗಳ ರಕ್ಷಣೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ
ಕಂಬಿ ಮುರಿತ, ಕೇಬಲ್ ತುಂಡಾಗುವಿಕೆ ಹಾಗೂ ಹೃದಯಾಘಾತದ ಘಟನೆಗಳ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಾಳುಗಳನ್ನು ಬೆಟ್ಟದಿಂದ ಕೆಳಕ್ಕೆ ಕರೆತಂದು ಆಸ್ಪತ್ರೆಗೆ ಸಾಗಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.
