ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ಕಾರ್ಯನಿರ್ವಹಿಸುತ್ತಿದೆ. ಈ ಪ್ರಕರಣದ ಬಗ್ಗೆ ವಿಧಾನಸಭೆಯಲ್ಲಿ ತೀವ್ರ ಚರ್ಚೆಗಳು ನಡೆದಿದ್ದು, ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದವೂ ನಡೆಯಿತು. ಈ ನಡುವೆ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಯೂಟ್ಯೂಬರ್‌ಗಳಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಗೃಹ ಸಚಿವರು ತಮ್ಮ ಹೇಳಿಕೆಯಲ್ಲಿ, “ಯಾವುದೇ ಯೂಟ್ಯೂಬರ್ ಆಗಲಿ ಅಥವಾ ಯೂಟ್ಯೂಬ್ ಚಾನೆಲ್ ಆಗಲಿ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಬಾರದು. ಧರ್ಮಸ್ಥಳದ ಕುರಿತು ಅವಮಾನಕರವಾಗಿ ಮಾತನಾಡಿದರೆ ಅಥವಾ ತಪ್ಪು ಮಾಹಿತಿ ಹರಡಿದರೆ, ಆ ಯೂಟ್ಯೂಬರ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಸ್‌ಐಟಿ ತನಿಖೆ ನಡೆಸುತ್ತಿರುವಾಗ ಅಪಪ್ರಚಾರ ಮಾಡಿದರೆ, ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸಲಾಗುವುದು,” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆ ಕಲಾಪದಲ್ಲಿ ಗೃಹ ಸಚಿವರು ಎಸ್‌ಐಟಿ ತನಿಖೆಯ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು. “ಧರ್ಮಸ್ಥಳದಲ್ಲಿ ಪತ್ತೆಯಾದ ಅಸ್ಥಿಪಂಜರ ಮತ್ತು ಮೂಳೆಗಳನ್ನು ಫೊರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ (ಎಫ್‌ಎಸ್‌ಎಲ್) ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬರುವವರೆಗೆ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವರದಿ ಬಂದ ನಂತರ ತನಿಖೆ ಮುಂದುವರಿಯಲಿದೆ,” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದರು.
ಧರ್ಮಸ್ಥಳ ಪ್ರಕರಣವು ರಾಜ್ಯದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಎಸ್‌ಐಟಿ ತನಿಖೆಯ ಫಲಿತಾಂಶಕ್ಕೆ ಸಾರ್ವಜನಿಕರು ಕಾತರದಿಂದ ಕಾಯುತ್ತಿದ್ದಾರೆ.