ಧಾರವಾಡ, ಜುಲೈ 17: ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ವಾಹನ ಚಾಲಕರ ಅಜಾಗರೂಕತೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಹೇಳಿದರೆ ತಪ್ಪಲ್ಲ. ಇದೀಗ ಅಂತಹದ್ದೇ ಘಟನೆಯೊಂದು ಧಾರವಾಡದಲ್ಲಿ ನಡೆದಿದೆ. ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಧಾರವಾಡ ನಗರದ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೃತರನ್ನು ಫಾತಿಮಾ ಜಾಗಿರ್ದಾರ್ (17) ಎಂದು ಗುರುತಿಸಲಾಗಿದೆ. ಅವರು ಧಾರವಾಡ ತಾಲೂಕಿನ ಚಂದನಮಟ್ಟಿ ಗ್ರಾಮದ ನಿವಾಸಿಯಾಗಿದ್ದು, ಧಾರವಾಡದ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.
ಮಾಹಿತಿಯ ಪ್ರಕಾರ, ಕಾಲೇಜಿನ ತರಗತಿ ಮುಗಿಸಿ ತಮ್ಮ ಊರಿಗೆ ತೆರಳಲು ಸಿಟಿ ಬಸ್ ನಿಲ್ದಾಣಕ್ಕೆ ಬಂದಿದ್ದ ವೇಳೆ, ಹಿಂಬದಿಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಫಾತಿಮಾ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಮತ್ತು ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಈ ಸಂಬಂಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
