ಬೆಂಗಳೂರು: ಎಂಎಲ್‌ಸಿ ಸಿ.ಟಿ.ರವಿಯವರ ಸಂಸ್ಕೃತಿ ಬಗ್ಗೆ ರಾಜ್ಯದ ಜನತೆಗೆ ಚೆನ್ನಾಗಿ ತಿಳಿದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿ.ಟಿ.ರವಿಯವರ ಪ್ರಚೋದನಕಾರಿ ಭಾಷಣದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ, “ಈ ಬಗ್ಗೆ ನನಗೆ ಸದ್ಯಕ್ಕೆ ಮಾಹಿತಿ ಇಲ್ಲ. ಆದರೆ, ವಿವರಗಳನ್ನು ತಿಳಿದುಕೊಳ್ಳುತ್ತೇನೆ. ಆದಾಗ್ಯೂ, ಸಿ.ಟಿ.ರವಿಯವರ ಸಂಸ್ಕೃತಿ ಬಗ್ಗೆ ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ,” ಎಂದು ವ್ಯಂಗ್ಯವಾಡಿದರು.
ಇದೇ ಸಂದರ್ಭದಲ್ಲಿ, ಗ್ರೇಟರ್ ಬೆಂಗಳೂರು ಚುನಾವಣೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಯ ಬಗ್ಗೆಯೂ ಡಿಎಂ ಮಾತನಾಡಿದರು. “ಬ್ಯಾಲೆಟ್ ಪೇಪರ್ ಬಳಸಿದರೆ ತಪ್ಪೇನು? ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೇ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕಾನೂನು ರೂಪಿಸಿದ್ದರು. ಚುನಾವಣಾ ಆಯೋಗದಲ್ಲಿಯೂ ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ನಡೆಸಲು ಅವಕಾಶವಿದೆ,” ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.





