ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ (SCSP) ಮತ್ತು ಗಿರಿಜನ ಉಪಯೋಜನೆ (TSP) ಅನುದಾನದಿಂದ 13,433 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿರುವುದಾಗಿ ವಿಧಾನಸಭೆಯಲ್ಲಿ ತಿಳಿಸಿದೆ.
ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ, 2025-26ರ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಒಟ್ಟು 42,000 ಕೋಟಿ ರೂ. ಅನುದಾನದಲ್ಲಿ, ಐದು ಗ್ಯಾರಂಟಿ ಯೋಜನೆಗಳಿಗೆ ಈ ಮೊತ್ತವನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಕ್ರಮಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಪರಿಶಿಷ್ಟ ಜಾತಿಗಳಿಗೆ ಮೀಸಲಾದ ಹಣವನ್ನು ಇತರ ಉದ್ದೇಶಗಳಿಗೆ ಏಕೆ ಬಳಸಲಾಗುತ್ತಿದೆ?” ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಇದು ದಲಿತ ಸಮುದಾಯಕ್ಕೆ ದ್ರೋಹವೆಂದು ಆರೋಪಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸದನದಲ್ಲಿ ಈ ವಿಷಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಪರಿಶಿಷ್ಟರಿಗೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ತಿರುಗಿಸಿರುವುದು ದಲಿತರ ಹಕ್ಕುಗಳಿಗೆ ಧಕ್ಕೆ ತರುವ ಕೃತ್ಯ ಎಂದು ಟೀಕಿಸಿದ್ದಾರೆ.





