ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಪೆಟ್ರೋಲ್ ಬಂಕ್ ಮಾಲೀಕರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಹೊಳೆನರಸೀಪುರ ತಾಲೂಕಿನ ನಾಗಲಾಪುರ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಬಂಕ್ ಮಾಲೀಕ ಮಂಜೇಗೌಡ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಘಟನೆಯ ವಿವರ:
ಮಂಜೇಗೌಡ ಅವರು ಹೊಳೆನರಸೀಪುರದಿಂದ ತಮ್ಮ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಹೋಗುತ್ತಿದ್ದಾಗ ಈ ದಾಳಿ ನಡೆದಿದೆ. ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ ಹೊಂಚು ಹಾಕಿ ಕುಳಿತಿದ್ದ ಮೂವರು ಅಪರಿಚಿತ ವ್ಯಕ್ತಿಗಳು, ಮಂಜೇಗೌಡರನ್ನು ಅಡ್ಡಗಟ್ಟಿ ಏಕಾಏಕಿ ಲಾಂಗು ಮತ್ತು ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ. ದಾಳಿಯ ತೀವ್ರತೆಗೆ ಮಂಜೇಗೌಡರು ಗಂಭೀರವಾಗಿ ಗಾಯಗೊಂಡಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದರು.
ಹಣದ ವ್ಯವಹಾರವೇ ಕಾರಣ?
ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 45 ಲಕ್ಷ ರೂಪಾಯಿ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಈ ಡೆಡ್ಲಿ ಅಟ್ಯಾಕ್ ನಡೆದಿದೆ ಎಂದು ಶಂಕಿಸಲಾಗಿದೆ. ಹಳೇ ದ್ವೇಷ ಅಥವಾ ಹಣಕಾಸಿನ ಕಿತ್ತಾಟ ಈ ಕೃತ್ಯಕ್ಕೆ ಪ್ರೇರಣೆ ನೀಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.
ಗಂಭೀರ ಸ್ಥಿತಿಯಲ್ಲಿದ್ದ ಮಂಜೇಗೌಡರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಾಯದ ತೀವ್ರತೆ ಹೆಚ್ಚಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.
