ಹಾಸನ: ಲಕ್ಷಾಂತರ ಭಕ್ತರಿಗೆ ವರ್ಷಕೊಮ್ಮೆ ದರ್ಶನ ಭಾಗ್ಯ ಕರುಣಿಸಿದ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಇಂದು ವಿದ್ಯುಕ್ತ ತೆರೆ ಬೀಳಲಿದೆ. ಕಳೆದ 14 ದಿನಗಳಿಂದ ನಡೆದ ದರ್ಶನೋತ್ಸವದ ಅಂತಿಮ ದಿನವಾದ ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಹಾಸನಾಂಬೆ ತಾಯಿಯ ಗರ್ಭಗುಡಿಯ ಬಾಗಿಲು ಶಾಸ್ತ್ರೋಕ್ತ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮುಚ್ಚಲಾಗುತ್ತದೆ.
ಗಣ್ಯರು, ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಪುರೋಹಿತರು ವಿಶೇಷ ಪೂಜೆ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಗರ್ಭಗುಡಿಯ ಬಾಗಿಲು ಬಂದ್ ಮಾಡಲಿದ್ದಾರೆ. ಬಳಿಕ ದೇವಾಲಯದ ಬಾಗಿಲಿನ ಕೀಲಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗುತ್ತದೆ. ಈ ಮಹತ್ವದ ಕ್ಷಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ, ಶಾಸಕ ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಲತಾ ಕುಮಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತಾ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾಗಲಿದ್ದಾರೆ.
ಈ ಬಾರಿ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಒಟ್ಟು 14 ದಿನಗಳ ಕಾಲ ಹಾಸನಾಂಬೆ ದರ್ಶನೋತ್ಸವ ಆಯೋಜಿಸಲಾಗಿತ್ತು. ಇದರಲ್ಲಿ 12 ದಿನಗಳ ಕಾಲ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ 12 ದಿನಗಳಲ್ಲಿಯೇ ಸುಮಾರು 28 ಲಕ್ಷ ಭಕ್ತರು ಹಾಸನಾಂಬೆ ತಾಯಿಯ ದರ್ಶನ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ.
ದರ್ಶನೋತ್ಸವದ ಸಂದರ್ಭದಲ್ಲಿ ದೇವಾಲಯದ ಆದಾಯದಲ್ಲೂ ದಾಖಲೆ ನಿರ್ಮಾಣವಾಗುವ ನಿರೀಕ್ಷೆಯಿದೆ. ಟಿಕೆಟ್ ಮತ್ತು ಲಾಡು ಮಾರಾಟದಿಂದಲೇ ಸುಮಾರು 26 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ. ನಾಳೆ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆಯಲಿದ್ದು, ಒಟ್ಟು ಆದಾಯದ ನಿಖರ ಚಿತ್ರಣ ಹೊರಬೀಳಲಿದೆ.
ಇಂದು ಗರ್ಭಗುಡಿಯ ಬಾಗಿಲು ಮುಚ್ಚಿದ ಬಳಿಕ ಭಕ್ತರು ಮತ್ತೆ ಹಾಸನಾಂಬೆ ತಾಯಿಯ ದರ್ಶನ ಪಡೆಯಲು ಮುಂದಿನ ವರ್ಷದ ಜಾತ್ರೆಯವರೆಗೆ ಕಾಯಬೇಕಾಗುತ್ತದೆ. ಹೀಗಾಗಿ ಅಂತಿಮ ದಿನದ ದರ್ಶನಕ್ಕೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿದೆ.





