ಹಾಸನ: ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಕಂದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯಿತಿಯ ಹೊಯ್ಸಳ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಹಾಸನಾಂಬ ಜಾತ್ರೆ ಜಿಲ್ಲೆಯ ಗೌರವದ ಪ್ರತೀಕವಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಮತ್ತು ಹೊರ ರಾಜ್ಯಗಳಿಂದ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಆದ್ದರಿಂದ, ಅಧಿಕಾರಿಗಳು ಎಚ್ಚರಿಕೆಯಿಂದ ಸಣ್ಣ ತಪ್ಪುಗಳನ್ನೂ ತಪ್ಪಿಸಿ, ಉತ್ತಮ ನಿರ್ವಹಣೆಯ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು,” ಎಂದರು.
ಅಕ್ಟೋಬರ್ 9, 2025 ರಂದು ಶ್ರೀ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುವುದು ಮತ್ತು ಅಕ್ಟೋಬರ್ 23 ರಂದು ಮುಚ್ಚಲಾಗುವುದು. ಒಟ್ಟು 13 ದಿನಗಳ ಕಾಲ ಭಕ್ತಾದಿಗಳಿಗೆ ದೇವಿಯ ದರ್ಶನಕ್ಕೆ ಅವಕಾಶವಿರುತ್ತದೆ.
ಭಕ್ತರಿಗೆ ಸೌಕರ್ಯಗಳು:
ಸಚಿವ ಕೃಷ್ಣ ಬೈರೇಗೌಡರು ಭಕ್ತರಿಗೆ ಕುಡಿಯುವ ನೀರು, ಶೌಚಾಲಯ, ವಾಹನ ನಿಲುಗಡೆಗೆ ಪಾರ್ಕಿಂಗ್, ಪ್ರಸಾದ ವಿತರಣೆ, ಮತ್ತು ಸರತಿ ಸಾಲಿನಲ್ಲಿ ದರ್ಶನಕ್ಕೆ ಬ್ಯಾರಿಕೇಡ್ ವ್ಯವಸ್ಥೆಯನ್ನು ಕಲ್ಪಿಸಲು ಸೂಚಿಸಿದರು. ಜನಸಂದಣಿಯಿಂದ ಗೊಂದಲವಾಗದಂತೆ ಶಾಂತಿಯುತ ನಿರ್ವಹಣೆಗೆ ಒತ್ತು ನೀಡಿದರು.
ಜಾತ್ರೆಯನ್ನು ಸ್ಮರಣೀಯವಾಗಿಸಲು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಮತ್ತು ಜಾನಪದ ಕಲಾ ಪ್ರದರ್ಶನಗಳಿಗೆ ಆದ್ಯತೆ ನೀಡಲು ತಿಳಿಸಿದರು. ಸ್ಥಳೀಯ ತಿಂಡಿಗಳು, ಕರಕುಶಲ ವಸ್ತುಗಳ ಮಾರಾಟಕ್ಕೆ ಮಳಿಗೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಜಿಲ್ಲಾಡಳಿತದ ಸಿದ್ಧತೆ:
ಜಿಲ್ಲಾಧಿಕಾರಿ ಲತಾ ಕುಮಾರಿ ಅವರು, “ಜಾತ್ರಾ ಮಹೋತ್ಸವಕ್ಕೆ ವಿವಿಧ ತಂಡಗಳನ್ನು ರಚಿಸಲಾಗಿದೆ. ಜನಸಂದಣಿ ನಿಯಂತ್ರಣಕ್ಕೆ ಮತ್ತು ಸುರಕ್ಷತೆಗಾಗಿ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ,” ಎಂದು ತಿಳಿಸಿದರು.
ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿ ಮಾರುತಿ ಅವರು ಜಾತ್ರೆಗೆ ಮಾಡಿರುವ ಸಿದ್ಧತೆಗಳ ಬಗ್ಗೆ ವಿವರವಾಗಿ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಂಸದ ಶ್ರೇಯಸ್ ಪಟೇಲ್, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಶಾಸಕರಾದ ಸ್ವರೂಪ್ ಪ್ರಕಾಶ್, ಸಿಮೆಂಟ್ ಮಂಜು, ಮಹಾನಗರ ಪಾಲಿಕೆ ಮೇಯರ್ ಹೇಮಾಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.