ಹಾವೇರಿ ಆ.25: ಹಾವೇರಿಯ ಹಾನಗಲ್ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆಯ ಬಾಗಿಲ ಬಳಿ ಮಗುವಿನ ಮೃತದೇಹವಿಟ್ಟು ಸಂಬಂಧಿಕರು ಆಸ್ಪತ್ರೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಚಿಕೇರಿ ಹೊಸಳ್ಳಿ ಗ್ರಾಮದ ನಿವಾಸಿ ಭವಾನಿ ಮಂಜುನಾಥ ಎಂಬ ಗರ್ಭಿಣಿ ಜುಲೈ 31 ರಂದು ಹೆರಿಗೆಗಾಗಿ ಹಾನಗಲ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆ ನೋವು ಹೆಚ್ಚಾದರೂ ವೈದ್ಯರು ಸೂಕ್ತವಾಗಿ ಸ್ಪಂದಿಸಲಿಲ್ಲ. ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡಿದ್ದರಿಂದ ಪರಿಸ್ಥಿತಿ ಗಂಭೀರವಾಯಿತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬಳಿಕ ಗರ್ಭಿಣಿಯನ್ನು ಹಾನಗಲ್‌ನಿಂದ ಹಾವೇರಿಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಹೆರಿಗೆ ಸಂಭವಿಸಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ನಂತರ ನವಜಾತ ಶಿಶುವನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಸುಮಾರು 25 ದಿನಗಳ ಕಾಲ ಮಗುವಿಗೆ ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಮಗುವಿನ ಸಾವಿಗೆ ಹಾನಗಲ್ ತಾಲೂಕು ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಹಾಗೂ ಚಿಕಿತ್ಸೆ ವಿಳಂಬವೇ ಕಾರಣ ಎಂದು ಆರೋಪಿಸಿರುವ ಸಂಬಂಧಿಕರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮಗುವಿನ ಮೃತದೇಹವನ್ನು ಹಾನಗಲ್ ತಾಲೂಕು ಆಸ್ಪತ್ರೆಯ ಬಾಗಿಲ ಬಳಿ ಇಟ್ಟು ಪ್ರತಿಭಟನೆ ನಡೆಸಿದ ಕುಟುಂಬಸ್ಥರು, ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧವೂ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರಕರಣದ ಕುರಿತು ಹಿರಿಯ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಸೂಕ್ತ ಕ್ರಮದ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಹಾನಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದಾರೆ. ಕುಟುಂಬಸ್ಥರ ಆರೋಪಗಳ ಕುರಿತು ತನಿಖೆ ನಡೆಸಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.
ಮಗುವಿನ ಸಾವಿಗೆ ನಿಜವಾದ ಕಾರಣವೇನು ಮತ್ತು ವೈದ್ಯರ ನಿರ್ಲಕ್ಷ್ಯ ಇದೆಯೇ ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕಿದೆ. ಈ ನಡುವೆ ಕುಟುಂಬಸ್ಥರು ನ್ಯಾಯಕ್ಕಾಗಿ ಆಗ್ರಹಿಸಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳ ಕ್ರಮದತ್ತ ಎಲ್ಲರ ಗಮನ ನೆಟ್ಟಿದೆ.





