ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಸೇತುವೆ ಬಳಿ ಕೆಎಸ್‌ಆರ್‌ಟಿಸಿ ಬಸ್ ಒಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸದೇ ಭಾರೀ ಅನಾಹುತವೊಂದು ತಪ್ಪಿದೆ.
ಅಥಣಿಯಿಂದ ಜಮಖಂಡಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ (ನಂಬರ್: KA-23 F 6783) ಈ ಘಟನೆಗೆ ಸಿಲುಕಿದೆ. ಬಸ್‌ನಲ್ಲಿ ಏಳೆಂಟು ಪ್ರಯಾಣಿಕರಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಸ್ತೆಯ ಬ್ರೇಕರ್ ದಾಟಿಸುವ ವೇಳೆ ಬಸ್‌ನ ಪಾಟಾ ಮುರಿದಿದ್ದು ಈ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದೆ.
ಘಟನೆಯ ನಂತರ ಬಸ್‌ನ ಹಿಂಬದಿಯ ಗಾಜು ಒಡೆದು ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.