ಬೆಂಗಳೂರು: ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ. ಸುಧೀಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ, ಜೈವಿಕ ಇಂಧನ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ 2024-25ನೇ ಸಾಲಿನ ಕಾರ್ಯಯೋಜನೆಗಳ ವಿವರವಾದ ವರದಿಯನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ, ಅಧ್ಯಕ್ಷರಾಗಿ ತಮ್ಮ ಜವಾಬ್ದಾರಿಯನ್ನು ವಹಿಸಿಕೊಂಡು, ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಲು ಅವಕಾಶ ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.
ಸುಧೀಂದ್ರ ಅವರು, ಕಳೆದ ಒಂದು ವರ್ಷದಲ್ಲಿ ಜೈವಿಕ ಇಂಧನ ಕ್ಷೇತ್ರದ ಉನ್ನತೀಕರಣ ಮತ್ತು ವಾಣಿಜ್ಯೀಕರಣಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಪೂರಕ ವಾತಾವರಣ ನಿರ್ಮಾಣಕ್ಕಾಗಿ “ಕರ್ನಾಟಕ ರಾಜ್ಯ ಜೈವಿಕ ಇಂಧನ ನೀತಿ” ರಚನೆಯ ಕಾರ್ಯವು ಪ್ರಗತಿಯಲ್ಲಿದೆ. ಈ ನೀತಿಯು ಸರ್ಕಾರದಿಂದ ಅನುಮೋದನೆಗೊಂಡರೆ, ಮುಂದಿನ ಐದು ವರ್ಷಗಳಲ್ಲಿ 1 ಲಕ್ಷ ಕೋಟಿಗೂ ಅಧಿಕ ಬಂಡವಾಳ ಹೂಡಿಕೆ ಸಾಧ್ಯವಾಗಲಿದೆ ಎಂದು ಅಂಕಿ-ಅಂಶಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ತಿಳಿಸಿದರು.
ವಿವಿಧ ವಿಶ್ವವಿದ್ಯಾಲಯಗಳು, ಜೈವಿಕ ಇಂಧನ ಕ್ಷೇತ್ರದ ಉದ್ದಿಮೆದಾರರು, ಮತ್ತು ಕೈಗಾರಿಕೆಗಳೊಂದಿಗೆ ನಡೆಸಿದ ಚರ್ಚೆಗಳು, ರೂಪಿಸಿದ ಕಾರ್ಯಯೋಜನೆಗಳು, ಮತ್ತು ಅನುಷ್ಠಾನ ಮಾರ್ಗಸೂಚಿಗಳ ಬಗ್ಗೆ ಸುಧೀಂದ್ರ ಮಾಹಿತಿ ನೀಡಿದರು. 2024-25ನೇ ಸಾಲಿನಲ್ಲಿ ಮಂಡಳಿಗೆ ಹೆಚ್ಚಿನ ಅನುದಾನದ ಅಗತ್ಯವಿರುವುದನ್ನು ಒತ್ತಿ ಹೇಳಿ, ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರದಿಯನ್ನು ಪರಿಶೀಲಿಸಿ, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸುಧೀಂದ್ರ ತಿಳಿಸಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಮಂಡಳಿಯ ಅಧಿಕಾರಿಗಳು ಮತ್ತು ಸಲಹೆಗಾರರು ಉಪಸ್ಥಿತರಿದ್ದರು.