ಗದಗ: ಕರ್ನಾಟಕ ಸರ್ಕಾರವು ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲಿ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಸಲು ಕುಸುಮ್-ಬಿ ಮತ್ತು ಕುಸುಮ್-ಸಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಇಂದು ಗದಗನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, “ವಿದ್ಯುತ್ ಮಾರ್ಗ ಜಾಲದಿಂದ 500 ಮೀಟರ್‌ಗಿಂತ ಹೊರಗಿರುವ ಕೃಷಿ ಪಂಪ್‌ಸೆಟ್‌ಗಳಿಗೆ ಕುಸುಮ್-ಬಿ ಯೋಜನೆಯಡಿ ಸೌರ ವಿದ್ಯುತ್ ಒದಗಿಸಲಾಗುವುದು. ಈ ಯೋಜನೆಗೆ ಸರ್ಕಾರದ ಸಬ್ಸಿಡಿಯನ್ನು 30% ರಿಂದ 50%ಕ್ಕೆ ಹೆಚ್ಚಿಸಲಾಗಿದೆ. ಇದೇ ರೀತಿ, ಕುಸುಮ್-ಸಿ ಯೋಜನೆಯಡಿ ಕೃಷಿ ಫೀಡರ್‌ಗಳ ಸೌರೀಕರಣ ಕಾರ್ಯವು ಪ್ರಗತಿಯಲ್ಲಿದ್ದು, ಇದರಿಂದ ರೈತರಿಗೆ ಹಗಲಿನಲ್ಲಿ 7 ಗಂಟೆ ವಿದ್ಯುತ್ ಒದಗಿಸಲು ಸಾಧ್ಯವಾಗುತ್ತದೆ,” ಎಂದು ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ಅಕ್ರಮ ಪಂಪ್‌ಸೆಟ್ ಸಕ್ರಮೀಕರಣ:
“2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ 4.5 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳಿವೆ. ಇದರಲ್ಲಿ 2.5 ಲಕ್ಷ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಿ ಸೌರ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಮುಂದಿನ ಒಂದು ವರ್ಷದಲ್ಲಿ ಉಳಿದ ಪಂಪ್‌ಸೆಟ್‌ಗಳ ಸಕ್ರಮೀಕರಣವೂ ಪೂರ್ಣಗೊಳ್ಳಲಿದೆ.” ಜೊತೆಗೆ, ತ್ವರಿತ ವಿದ್ಯುತ್ ಸಂಪರ್ಕಕ್ಕಾಗಿ ‘ಶೀಘ್ರ ಸಂಪರ್ಕ ಯೋಜನೆ’ಯನ್ನು ಜಾರಿಗೆ ತರಲಾಗಿದೆ. ರೈತರು ಸ್ವಂತ ವೆಚ್ಚದಲ್ಲಿ ವಿದ್ಯುತ್ ಜಾಲ ಮತ್ತು ಮೂಲಸೌಕರ್ಯ ಕಲ್ಪಿಸಿದರೆ, ಎಸ್ಕಾಂಗಳಿಂದ ಟ್ರಾನ್ಸ್‌ಫಾರ್ಮರ್‌ಗಳನ್ನು ಒದಗಿಸಲಾಗುತ್ತದೆ ಎಂದು ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ:
“ನಮ್ಮ ಅಧಿಕಾರಾವಧಿಯಲ್ಲಿ ಕೇವಲ ಒಂದು ತಿಂಗಳು ಮಾತ್ರ ವಿದ್ಯುತ್ ಕೊರತೆ ಉಂಟಾಗಿತ್ತು. ಉತ್ತರ ಪ್ರದೇಶ ಮತ್ತು ಪಂಜಾಬ್‌ನಿಂದ ವಿನಿಮಯ ಆಧಾರದಲ್ಲಿ ವಿದ್ಯುತ್ ಪಡೆದು ಸಮಸ್ಯೆಯನ್ನು ಬಗೆಹರಿಸಲಾಯಿತು. ಸದ್ಯ ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ರೈತರಿಗೆ ನಿರಂತರ ವಿದ್ಯುತ್ ಒದಗಿಸಲು ಹೆಚ್ಚಿನ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗಿದೆ,” ಎಂದು ಸಚಿವ ಜಾರ್ಜ್ ತಿಳಿಸಿದರು.
ಮೂಲಸೌಕರ್ಯ ವಿಸ್ತರಣೆ:
ಕೆಪಿಟಿಸಿಎಲ್‌ನಿಂದ 100 ಹೊಸ ವಿದ್ಯುತ್ ಉಪಕೇಂದ್ರಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಪ್ರತಿ ವರ್ಷ ಹೆಚ್ಚಿನ ಉಪಕೇಂದ್ರಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ. ಪವನ ಮತ್ತು ಸೌರ ವಿದ್ಯುತ್‌ನ್ನು ಬ್ಯಾಟರಿ ಮೂಲಕ ಸಂಗ್ರಹಿಸುವ ಕಾರ್ಯವೂ ನಡೆಯುತ್ತಿದೆ. “ರೈತರಿಗೆ ತೊಂದರೆಯಾಗದಂತೆ ಟ್ರಾನ್ಸ್‌ಫಾರ್ಮರ್ ಬ್ಯಾಂಕ್ ರಚಿಸಲಾಗಿದೆ. ಇಲಾಖೆಯ ವಾಹನಗಳ ಮೂಲಕ ಟ್ರಾನ್ಸ್‌ಫಾರ್ಮರ್‌ಗಳನ್ನು ರೈತರಿಗೆ ತಲುಪಿಸಲಾಗುವುದು,” ಎಂದು ಸಚಿವ ಜಾರ್ಜ್ ತಿಳಿಸಿದ್ದಾರೆ,
3000 ಲೈನ್‌ಮೆನ್ ನೇಮಕಾತಿ:
‘”ಇಂಧನ ಇಲಾಖೆಯಲ್ಲಿ 3,000 ಲೈನ್‌ಮೆನ್‌ಗಳ ನೇಮಕಾತಿ ಪ್ರಕ್ರಿಯೆ ಒಂದು ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಲೈನ್‌ಮೆನ್‌ಗಳು ತಮ್ಮ ಸಾಮರ್ಥ್ಯವನ್ನು ಈಗಾಗಲೇ ತೋರಿಸಿದ್ದಾರೆ. ಮಳೆ-ಗಾಳಿಯಿಂದ ಉಂಟಾದ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ವಿದ್ಯುತ್ ಪೂರೈಕೆ ಪುನಃಸ್ಥಾಪಿಸಿದ್ದಾರೆ,” ಎಂದು ಸಚಿವ ಜಾರ್ಜ್ ಮೆಚ್ಚುಗೆ ವ್ಯಕ್ತಪಡಿಸಿದರು.‘
ಗೃಹ ಜ್ಯೋತಿ 99% ಸಾಧನೆ:
‘”ಗೃಹ ಜ್ಯೋತಿ ಯೋಜನೆಯು ರಾಜ್ಯದಲ್ಲಿ 99% ಸಾಧನೆ ಕಂಡಿದೆ. ಗದಗ ಜಿಲ್ಲೆಯಲ್ಲಿ 98.49% ಸಾಧನೆಯಾಗಿದೆ, ಗದಗ ನಗರದಲ್ಲಿ 99.47% ಮತ್ತು ಗ್ರಾಮೀಣ ಭಾಗದಲ್ಲಿ 99.45% ಸಾಧನೆಯಾಗಿದೆ,” ಎಂದು ಜಾರ್ಜ್ ತಿಳಿಸಿದರು.‘
ರೈತರಿಗೆ ಶೇ. 10 ಪಾಲುದಾರಿಕೆಗೆ ಮನವಿ
‘ಗದಗ ಜಿಲ್ಲೆಯಲ್ಲಿ ಪವನ ಮತ್ತು ಸೌರ ವಿದ್ಯುತ್ ಉತ್ಪಾದನೆಗೆ ಉತ್ತಮ ಅವಕಾಶವಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ಹೇಳಿದರು. “ಈ ಯೋಜನೆಗಳಿಗೆ ಜಮೀನು ಒದಗಿಸುವ ರೈತರಿಗೆ 10% ಪಾಲುದಾರಿಕೆ ನೀಡಬೇಕು. ಉತ್ತರ ಕನ್ನಡ ಜಿಲ್ಲೆಗೆ ರಿಯಾಯಿತಿ ನೀಡಿದಂತೆ ಗದಗ ಜಿಲ್ಲೆಗೂ ರಿಯಾಯಿತಿ ಒದಗಿಸಬೇಕು,” ಎಂದರು.
ನರಗುಂದ ಶಾಸಕ ಸಿ.ಸಿ. ಪಾಟೀಲ್, “ಮಳೆಯಿಂದ ಹಾನಿಗೊಳಗಾದ ವಿದ್ಯುತ್ ಕಂಬಗಳು ಮತ್ತು ತಂತಿಗಳನ್ನು ಸರಿಪಡಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ರಾತ್ರಿಯಲ್ಲಿ ವಿದ್ಯುತ್ ಒದಗಿಸಬೇಕು,” ಎಂದರು. ರೋಣ ಶಾಸಕ ಜಿ.ಎಸ್. ಪಾಟೀಲ್, “ತೋಟದ ಮನೆಗಳಿಗೆ ಸಿಂಗಲ್ ಫೇಸ್ ವಿದ್ಯುತ್ ನಿರಂತರವಾಗಿ ನೀಡಬೇಕು. 24 ಗಂಟೆಯೊಳಗೆ ರೈತರಿಗೆ ಟ್ರಾನ್ಸ್‌ಫಾರ್ಮರ್ ಒದಗಿಸಬೇಕು,” ಎಂದು ಸಲಹೆ ನೀಡಿದರು.
ಸಭೆಯಲ್ಲಿ ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್ ಫೀರ್ ಎಸ್. ಖಾದ್ರಿ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ ಮತ್ತು ಹೆಸ್ಕಾಂ, ಕೆಪಿಟಿಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.





