ಮಂಡ್ಯ ಆ. 25: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಖಂಡಿಸಿ ಮಂಡ್ಯ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಮುಂದುವರಿದಿದೆ. ಶ್ರೀರಂಗಪಟ್ಟಣದಲ್ಲಿ ಭೂಮಿತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ವಿಶಿಷ್ಟ ರೀತಿಯಲ್ಲಿ ‘ತಲೆ ಮೇಲೆ ಚಪ್ಪಡಿ’ ಚಳುವಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಅಂಬೇಡ್ಕರ್ ವೃತ್ತದಿಂದ ತಾಲೂಕು ಕಚೇರಿವರೆಗೆ ರೈತರು ತಲೆ ಮೇಲೆ ಕಲ್ಲು ಹೊತ್ತು ಜಾಥಾ ನಡೆಸಿದರು. ಬಳಿಕ ತಾಲೂಕು ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ತಲೆ ಮೇಲೆ ಚಪ್ಪಡಿ ಹೊತ್ತು ಧರಣಿ ನಡೆಸಿದರು.
ರೈತ ಮುಖಂಡ ನಂಜುಂಡೇಗೌಡ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ಹಾಗೂ ಕಾವೇರಿ ನೀರು ನಿರ್ವಹಣೆಗೆ ಸಂಬಂಧಿಸಿದ ಪ್ರಾಧಿಕಾರಗಳ ವಿರುದ್ಧ ರೈತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯ ಜಿಲ್ಲೆಯ ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
“ನಮ್ಮ ಕಟ್ಟೆಯ ನೀರನ್ನು ತಮಿಳುನಾಡಿಗೆ ಹರಿಸಿ ಸರ್ಕಾರ ನಮ್ಮ ಜಿಲ್ಲೆಯ ರೈತರ ತಲೆ ಮೇಲೆ ಚಪ್ಪಡಿ ಎಳೆದಿದೆ” ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಮಂಡ್ಯ ಜಿಲ್ಲೆಯ ರೈತರ ಹಿತಾಸಕ್ತಿಯನ್ನು ಕಡೆಗಣಿಸಬಾರದು ಎಂದು ಅವರು ಒತ್ತಾಯಿಸಿದರು.
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದರಿಂದ ಜಿಲ್ಲೆಯ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುವ ಆತಂಕವಿದ್ದು, ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಬಹುದು ಎಂದು ರೈತರು ಹೇಳಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಿ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಜಿಲ್ಲೆಯ ರೈತರ ಹಿತ ಕಾಪಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಪ್ರತಿಭಟನೆ ನಡೆಸಲಾಗಿದೆ. ತಮಿಳುನಾಡಿಗೆ ಹರಿಸಲಾಗುತ್ತಿರುವ ನೀರನ್ನು ಕೂಡಲೇ ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರೈತ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮಂಡ್ಯದಲ್ಲಿ ಕಾವೇರಿ ನೀರಿನ ವಿಚಾರವಾಗಿ ಪ್ರತಿಭಟನೆಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ.
