ಮಂಡ್ಯ ಸೆ.09: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಸಮೀಪದ ವರಹಸಂದ್ರ ಗೇಟ್ ಬಳಿ ನಡೆದಿದೆ. ಕಬ್ಬಿಣದ ಬಾರ್‌ಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಕಬ್ಬಿಣದ ಕಂಬಗಳನ್ನು ತುಂಬಿಕೊಂಡಿದ್ದ ಟ್ರ್ಯಾಕ್ಟರ್ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿತ್ತು. ಈ ವೇಳೆ ಕೆಎಸ್‌ಆರ್‌ಟಿಸಿ ಬಸ್ ಟ್ರ್ಯಾಕ್ಟರ್ ಅನ್ನು ಓವರ್‌ಟೇಕ್ ಮಾಡಲು ಮುಂದಾಗಿದೆ ಎನ್ನಲಾಗಿದ್ದು, ಇದೇ ಸಂದರ್ಭದಲ್ಲಿ ಬಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಉದ್ದನೆಯ ಕಬ್ಬಿಣದ ರಾಡ್‌ಗಳು ಬಸ್‌ನ ಮುಂಭಾಗವನ್ನು ಸೀಳಿ ಒಳಭಾಗಕ್ಕೆ ನುಗ್ಗಿವೆ.
ಕಬ್ಬಿಣದ ಬಾರ್‌ಗಳು ಚಾಲಕನ ದೇಹಕ್ಕೆ ನುಗ್ಗಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಚಾಲಕನನ್ನು ಹಾಸನ ಮೂಲದ ಶೇಖರ್ ಎಂದು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ದೃಶ್ಯ ಭೀಕರವಾಗಿದ್ದು, ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಘಟನೆಯಲ್ಲಿ ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಸುಮಾರು ಎಂಟು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ತಕ್ಷಣವೇ ನಾಗಮಂಗಲ ತಾಲೂಕಿನ ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಬೆಳ್ಳೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸುವ ಕಾರ್ಯ ಕೈಗೊಳ್ಳಲಾಗಿದ್ದು, ಹೆದ್ದಾರಿಯಲ್ಲಿ ಸಂಚಾರಕ್ಕೂ ಕೆಲಕಾಲ ಅಡಚಣೆ ಉಂಟಾಗಿತ್ತು ಎನ್ನಲಾಗಿದೆ.
ಬಸ್ ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣವೇ ಅಥವಾ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯವೂ ಇದರಲ್ಲಿ ಇದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಸಂಭವಿಸಿದ ಅಪಘಾತದ ನಿಖರ ಕಾರಣವನ್ನು ತನಿಖೆಯ ಬಳಿಕ ತಿಳಿಯಬೇಕಿದೆ.
ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
