ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್: ಹೈದರಾಬಾದ್‌ನಲ್ಲಿ ತಲೆ ಮರೆಸಿಕೊಂಡ ಖ್ಯಾತ ಸ್ವಾಮೀಜಿ!

ಉತ್ತರ ಕರ್ನಾಟಕದಲ್ಲಿ ಅಪಾರ ಭಕ್ತರನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾ ಮಠದ ಸ್ವಾಮಿ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಗೋಗಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಏನಿದು ಪ್ರಕರಣ?

ಸ್ವಯಂ ಘೋಷಿತ ದೇವಮಾನವ ಎಂದು ಹೇಳಿಕೊಳ್ಳುವ ಮಲ್ಲಿಕಾರ್ಜುನ ಮುತ್ಯಾ ಅವರು ಬಾಲಕಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಮುದ್ದಿಸುವಂತಹ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಡಿತು. ಇದರಿಂದ ಜನರ ಆಕ್ರೋಶ ಉಂಟಾಗಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸುಂಬೆ ಅವರು ದೂರು ದಾಖಲಿಸಲು ಸೂಚಿಸಿದ್ದರು. ಶಹಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಣ್ಣ ಉಮಾಪತಿ ಅವರ ದೂರಿನ ಮೇರೆಗೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ.

ಕಾನೂನು ವಿಭಾಗದಲ್ಲಿ 75(2) BNS (ಭಾರತೀಯ ನ್ಯಾಯ ಸಂಹಿತೆ) ಅಡಿಯಲ್ಲಿ ಕೇಸ್ ದಾಖಲಾಗಿದ್ದು, ಇದು ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ಮಲ್ಲಿಕಾರ್ಜುನ ಮುತ್ಯಾ ಹೈದರಾಬಾದ್‌ಗೆ ತೆರಳಿ ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕದ ಜೊತೆಗೆ ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲೂ ಅಪಾರ ಭಕ್ತರು ಇರುವ ಅವರ ವಿರುದ್ಧ ಯಾವುದೇ ಕ್ಷಣದಲ್ಲಿ ಬಂಧನದ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಜನರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ. ಪೊಲೀಸರು ತನಿಖೆಯನ್ನು ಮುಂದುವರೆಸಿದ್ದು, ಮುಂದಿನ ಕ್ರಮಗಳು ಶೀಘ್ರದಲ್ಲೇ ತಿಳಿಯಲಿವೆ.

Exit mobile version