ರಾಮನಗರ: ತಾಲೂಕಿನ ಜಯಪುರ ಗೇಟ್ ಸಮೀಪದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಇಂದು (ಜುಲೈ 13) ನಸುಕಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಒಂದು ಹೆದ್ದಾರಿಯ ಬ್ರಿಡ್ಜ್‌ನ ತಡೆಗೋಡೆಗೆ ಡಿಕ್ಕಿಯಾಗಿದ್ದು, ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಈ ದುರ್ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೃತರು ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ಮೂಲದವರು ಎಂದು ತಿಳಿದುಬಂದಿದೆ. ರಾಮನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಮತ್ತು ಮೃತರ ಮಾಹಿತಿಯನ್ನು ಕಲೆಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ. ಅಪಘಾತದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಿಂದ ಎಕ್ಸ್‌ಪ್ರೆಸ್‌ವೇನಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇಂತಹ ಅಪಘಾತಗಳು ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದ್ದು, ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಪೊಲೀಸರು ಸೂಚಿಸಿದ್ದಾರೆ.