ಶಹಾಪುರ: ಯಾದಗಿರಿ ಜಿಲ್ಲೆಯ ಶಹಾಪುರದ ವಸತಿ ಶಾಲೆಯೊಂದರಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ನಡೆದಿದೆ.
ಬುಧವಾರ ಮಧ್ಯಾಹ್ನ 2:30ರ ಸುಮಾರಿಗೆ ಶಹಾಪುರದ ವಸತಿ ಶಾಲೆಯ ಶೌಚಾಲಯದಲ್ಲಿ ಈ ಘಟನೆ ಸಂಭವಿಸಿದೆ. 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆ ಗುರುವಾರ ಬೆಳಕಿಗೆ ಬಂದಿದ್ದು, ಈ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ “ಬೇರೆ ಮೂಲಗಳಿಂದ ಈ ಘಟನೆಯ ಬಗ್ಗೆ ತಿಳಿದು, ಕ್ರಮಕ್ಕೆ ಮುಂದಾಗಿದ್ದೇವೆ,” ಎಂದು ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದ್ದಾರೆ.
ಪ್ರಸ್ತುತ, ವಿದ್ಯಾರ್ಥಿನಿ ಮತ್ತು ನವಜಾತ ಶಿಶು ಶಹಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಯ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಶಾಲಾ ಆಡಳಿತದ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ. ಶಶಿಧರ ಕೋಸಂಬೆ ಅವರು, “ಶಾಲೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿ ಈ ಘಟನೆಯನ್ನು ವರದಿ ಮಾಡದಿರುವುದು ಗಂಭೀರ ಲೋಪ. ತನಿಖೆಯ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು,” ಎಂದಿದ್ದಾರೆ.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ದೂರವಾಣಿ ಮೂಲಕ ಮಾತನಾಡಿ, ಘಟನೆ ಕುರಿತು ಪ್ರಕರಣ ದಾಖಲು ಮಾಡುವಂತೆ ಸೂಚಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ, ವಿಸ್ತ್ರತ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆಯೂ ತಾಕೀತು ಮಾಡಲಾಗಿದೆ’ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದರು.





