ಭದ್ರಾವತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್: 35 ಮಂದಿಗೆ ಗಾಯ

Untitled design 2026 03 30T160729.143

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಕಾಗೇಹಳ್ಳದ ಬಳಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದಾವಣಗೆರೆಯಿಂದ ಭದ್ರಾವತಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಮೇಲಿಂದ ಕೆಳಗಿನ ಹಳ್ಳಕ್ಕೆ ಬಿದ್ದಿದೆ. ಈ ಘಟನೆಯಲ್ಲಿ ಮೂವರು ಪ್ರಯಾಣಿಕರ ಕೈಕಾಲುಗಳು ಮುರಿದಿದ್ದು, ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು (ಮಾರ್ಚ್ 30) ಮಧ್ಯಾಹ್ನ ಸುಮಾರು 12:30ರ ಸುಮಾರಿಗೆ ಈ ಘಟನೆ ನಡೆದಿದೆ. ದಾವಣಗೆರೆಯಿಂದ ಪ್ರಯಾಣಿಕರನ್ನು ಹೊತ್ತು ವೇಗವಾಗಿ ಬರುತ್ತಿದ್ದ ಬಸ್, ಭದ್ರಾವತಿ ಸಮೀಪದ ಕಾಗೇಹಳ್ಳದ ಸೇತುವೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಅತಿಯಾದ ವೇಗದಲ್ಲಿದ್ದ ಬಸ್ ನೇರವಾಗಿ ಸೇತುವೆಯ ರಕ್ಷಣಾ ಗೋಡೆಯನ್ನು ಮುರಿದು ಹಳ್ಳಕ್ಕೆ ಉರುಳಿದೆ. ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

35 ಪ್ರಯಾಣಿಕರಿದ್ದ ಬಸ್

ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿ ಒಟ್ಟು 35 ಪ್ರಯಾಣಿಕರಿದ್ದರು ಎನ್ನಲಾಗಿದೆ. ಬಸ್ ಹಳ್ಳಕ್ಕೆ ಬೀಳುತ್ತಿದ್ದಂತೆ ಪ್ರಯಾಣಿಕರು ಕಿರುಚಾಡಿದ್ದಾರೆ. ಬಳಿಕ ಸ್ಥಳೀಯರು ತಕ್ಷಣವೇ ಧಾವಿಸಿ ಬಸ್‌ನ ಕಿಟಕಿಗಳನ್ನು ಒಡೆದು ಗಾಯಾಳುಗಳನ್ನು ಹೊರತೆಗೆಯಲು ನೆರವಾದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ಮೂವರು ಪ್ರಯಾಣಿಕರ ಕೈ ಮತ್ತು ಕಾಲುಗಳು ಮುರಿದು ತೀವ್ರ ರಕ್ತಸ್ರಾವವಾಗಿದೆ. ಉಳಿದ ಪ್ರಯಾಣಿಕರಿಗೆ ಗಾಜಿನ ಚೂರುಗಳು ತಗುಲಿ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಗೊಂಡ ತಕ್ಷಣವೇ ಎಲ್ಲರನ್ನೂ ಭದ್ರಾವತಿಯ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು. ಪ್ರಾಥಮಿಕ ಚಿಕಿತ್ಸೆಯ ನಂತರ, ತೀವ್ರವಾಗಿ ಗಾಯಗೊಂಡಿರುವ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ವಿಷಯ ತಿಳಿಯುತ್ತಿದ್ದಂತೆ ಭದ್ರಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯೇ ಈ ಭೀಕರ ಅಪಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ. ಸೇತುವೆಯ ತಿರುವಿನಲ್ಲಿ ವೇಗ ನಿಯಂತ್ರಿಸಲು ಸಾಧ್ಯವಾಗದೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Exit mobile version