ಶಿವಮೊಗ್ಗ, ಸೆ.18: ಕಸ್ತೂರಿರಂಗನ್ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ, ಶನಿವಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ. ಸಿಎಂ ಭೇಟಿ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಭದ್ರತೆ ಹಾಗೂ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿವೆ.
ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಬಾಳೇಬೈಲು ಪ್ರಥಮ ದರ್ಜೆ ಕಾಲೇಜು, ರಾಮೇಶ್ವರ ದೇವಸ್ಥಾನ ಹಾಗೂ ಜೂನಿಯರ್ ಕಾಲೇಜು ಮೈದಾನ ಸೇರಿದಂತೆ ವಿವಿಧೆಡೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್, ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಸೂಚನೆ ನೀಡಿದ್ದಾರೆ.
ತೀರ್ಥಹಳ್ಳಿಯ ಜೂನಿಯರ್ ಕಾಲೇಜು ಮೈದಾನದಲ್ಲಿ ಸುಮಾರು 10 ಸಾವಿರ ಜನರು ಸೇರಬಹುದಾದ ಬೃಹತ್ ಪೆಂಡಾಲ್ ನಿರ್ಮಿಸಲಾಗುತ್ತಿದೆ. ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಸಿಎಂ ಸಂಚರಿಸುವ ಸಾಧ್ಯತೆ ಇರುವ ಮಾರ್ಗಗಳಲ್ಲಿ ಸ್ವಚ್ಛತಾ ಕಾರ್ಯ, ರಸ್ತೆ ದುರಸ್ತಿ ಮತ್ತು ಗುಂಡಿ ಮುಚ್ಚುವ ಕೆಲಸಗಳು ವೇಗವಾಗಿ ನಡೆಯುತ್ತಿವೆ.
ಕಸ್ತೂರಿರಂಗನ್ ವರದಿಯಲ್ಲಿ ತೀರ್ಥಹಳ್ಳಿ ತಾಲೂಕಿನ ಹೆಚ್ಚಿನ ಗ್ರಾಮಗಳು ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಈ ವಿಚಾರದ ಕುರಿತು ಮುಖ್ಯಮಂತ್ರಿ ನೇತೃತ್ವದಲ್ಲಿ ಚರ್ಚೆ ನಡೆಸುವುದು ಅಗತ್ಯವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪಶ್ಚಿಮಘಟ್ಟಕ್ಕೆ ಸಂಬಂಧಿಸಿದ ಸಮಸ್ಯೆಗಳು, ವರದಿಯಿಂದ ಸ್ಥಳೀಯವಾಗಿ ಉಂಟಾಗಬಹುದಾದ ಪರಿಣಾಮಗಳು ಸೇರಿದಂತೆ ವಿವಿಧ ವಿಚಾರಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು ಸಭೆ ಆಯೋಜಿಸಲಾಗಿದೆ.
ಸಿಎಂ ಡಿ.ಕೆ. ಶಿವಕುಮಾರ್ ಅವರು ಮೊದಲು ರೈತರೊಂದಿಗೆ ಸಂವಾದ ನಡೆಸಿ, ಬಳಿಕ ಕಸ್ತೂರಿರಂಗನ್ ವರದಿ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಈ ಕಾರ್ಯಕ್ರಮವು ಕಸ್ತೂರಿರಂಗನ್ ವರದಿ ವಿಚಾರಕ್ಕೆ ಮಾತ್ರ ಸೀಮಿತವಾಗಿರಲಿದೆ ಎಂದು ತಿಳಿಸಲಾಗಿದೆ. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಪಕ್ಷಾತೀತವಾಗಿ ನಡೆಯಲಿದೆ ಎಂದು ಸ್ಥಳೀಯ ಜನಪ್ರತಿನಿಧಿಗಳು ಹೇಳಿದ್ದಾರೆ.
ಇನ್ನು ಸಿಎಂ ಭೇಟಿ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಪಟ್ಟಣದಲ್ಲಿ ವಾಹನ ಹಾಗೂ ಸಾರ್ವಜನಿಕರ ಸಂಚಾರ ಹೆಚ್ಚಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಸಂಚಾರ ವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ತಾಲೂಕಿನಲ್ಲಿ ಮೂರು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜು, ಯು.ಆರ್. ಅನಂತಮೂರ್ತಿ ಪ್ರೌಢಶಾಲೆ ಹಾಗೂ ಬಾಳೇಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ರಜೆ ನೀಡಲಾಗಿದೆ.
ತಹಶೀಲ್ದಾರ್ ರಂಜಿತ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಸಿಎಂ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆಯನ್ನೂ ಹೆಚ್ಚಿಸಲಾಗಿದ್ದು, ಕಾರ್ಯಕ್ರಮ ನಡೆಯುವ ಸ್ಥಳ ಮತ್ತು ಸಂಪರ್ಕ ರಸ್ತೆಗಳ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ.
ಕಸ್ತೂರಿರಂಗನ್ ವರದಿ ಕುರಿತು ಸ್ಥಳೀಯ ರೈತರು ಹಾಗೂ ಸಾರ್ವಜನಿಕರ ಅಭಿಪ್ರಾಯಗಳನ್ನು ಆಲಿಸಿ, ಪಶ್ಚಿಮಘಟ್ಟದ ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ತೀರ್ಥಹಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದತ್ತ ಇದೀಗ ಜಿಲ್ಲೆಯ ಜನರ ಗಮನ ನೆಟ್ಟಿದೆ.
