ಶೋರೂಮ್‌ನಿಂದ ಏಕಾಏಕಿ ನುಗ್ಗಿದ ಹೊಸ ಕಾರು; ಬೈಕ್ ಸವಾರರಿಗೆ ಗಂಭೀರ ಗಾಯ

ಶಿವಮೊಗ್ಗ ಅ.20 : ದಸರಾ ಹಬ್ಬದ ಸಂಭ್ರಮದಲ್ಲಿ ಹೊಸ ಕಾರು ಖರೀದಿಸಿ ಮನೆಗೆ ಕೊಂಡೊಯ್ಯುವ ಖುಷಿಯಲ್ಲಿದ್ದ ಕುಟುಂಬಕ್ಕೆ ಶೋರೂಮ್‌ನಿಂದ ಕಾರು ಹೊರತೆಗೆಯುವಾಗಲೇ ಆಘಾತ ಎದುರಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ನಡೆದಿದೆ. ಹೊಸದಾಗಿ ಡೆಲಿವರಿ ಪಡೆದ ಕಾರು ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆಗೆ ನುಗ್ಗಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾಗರ ನಗರದ ಮಾರುತಿ ಕಾರು ಶೋರೂಮ್‌ ಬಳಿ ಈ ಅಪಘಾತ ಸಂಭವಿಸಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ ಹೊಸ ಕಾರನ್ನು ಖರೀದಿಸಿದ್ದ ಚಾಲಕ, ಶೋರೂಮ್‌ನಿಂದ ಕಾರನ್ನು ಹೊರತೆಗೆದುಕೊಂಡು ರಸ್ತೆಗೆ ಬರಲು ಮುಂದಾಗಿದ್ದರು. ಈ ವೇಳೆ ಏಕಾಏಕಿ ಕಾರು ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿದ ಕಾರು ಮೊದಲು ಶೋರೂಮ್ ಎದುರಿನಲ್ಲಿದ್ದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ವೇಗವಾಗಿ ರಸ್ತೆಗೆ ನುಗ್ಗಿದ ಕಾರು, ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಸವಾರ ಹಾಗೂ ಹಿಂಬದಿ ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿದ್ದವರು ತಕ್ಷಣ ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ. ಬಳಿಕ ಇಬ್ಬರನ್ನೂ ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಇನ್ನು ಈ ಅಪಘಾತದ ಸಂಪೂರ್ಣ ದೃಶ್ಯ ಶೋರೂಮ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರು ಶೋರೂಮ್‌ನಿಂದ ಹೊರಬಂದು ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆಯಲ್ಲಿದ್ದ ಬೈಕ್‌ಗೆ ಗುದ್ದುವ ದೃಶ್ಯ ಕ್ಯಾಮೆರಾದಲ್ಲಿ ದಾಖಲಾಗಿದೆ.

ಹೊಸ ಕಾರು ಖರೀದಿಸಿ ದಸರಾ ಸಂಭ್ರಮದಲ್ಲಿದ್ದ ಸಂದರ್ಭದಲ್ಲಿ ನಡೆದ ಈ ಅಪಘಾತ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version