ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ

Untitled design (38)

ಶಿವಮೊಗ್ಗ ಅ.08: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಬಾಳು ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಸಾಗರದತ್ತ ತೆರಳುತ್ತಿದ್ದ ‘ಡ್ರೀಮ್ ಲೈನ್’ ಖಾಸಗಿ ಬಸ್‌ನಲ್ಲಿ ಮುಂಜಾನೆ ಸುಮಾರು 5:45ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬಸ್ ಚಲಿಸುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಚಾಲಕ ತಕ್ಷಣ ಎಚ್ಚೆತ್ತುಕೊಂಡು ಬಸ್ ಅನ್ನು ನಿಲ್ಲಿಸಿದ್ದಾರೆ. ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಲಾಗಿದ್ದು, ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ.

ಬೆಂಕಿಯ ತೀವ್ರತೆ ಹೆಚ್ಚಾದ ಪರಿಣಾಮ ಕೆಲವೇ ಸಮಯದಲ್ಲಿ ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಘಟನೆಯಿಂದ ಬಸ್‌ನ ಬಹುತೇಕ ಭಾಗ ಸುಟ್ಟು ಕರಕಲಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿ ತಿಳಿದು ಆನಂದಪುರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಪೊಲೀಸರು ಘಟನಾ ಸ್ಥಳ ಪರಿಶೀಲನೆ ನಡೆಸಿದ್ದು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬುದರ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ  ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲೇ ಮೊಕ್ಕಾಂ ಹೂಡಿದ ಅವರು ಅಧಿಕಾರಿಗಳಿಂದ ಘಟನೆ ಕುರಿತು ಮಾಹಿತಿ ಪಡೆದರು. ಪ್ರಯಾಣಿಕರ ಸುರಕ್ಷತೆ ಹಾಗೂ ಘಟನೆಯ ಹಿನ್ನೆಲೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡರೂ ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಸಮಾಧಾನದ ಸಂಗತಿಯಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸುವಲ್ಲಿ ಚಾಲಕನ ಸಮಯಪ್ರಜ್ಞೆ ಪ್ರಮುಖ ಪಾತ್ರ ವಹಿಸಿದೆ.

Exit mobile version