ಶಿವಮೊಗ್ಗ: ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅನಿರೀಕ್ಷಿತ ಹೆರಿಗೆ ಪ್ರಕರಣಗಳು ಹೆಚ್ಚುತ್ತಿರುವ ಆತಂಕಕಾರಿ ಸ್ಥಿತಿಯಲ್ಲಿ, ಶಿವಮೊಗ್ಗದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 9ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗರ್ಭಿಣಿಯಾಗಿ, ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ವಿದ್ಯಾಭ್ಯಾಸದ ಮೂಲಕ ತನ್ನ ಭವಿಷ್ಯವನ್ನು ರೂಪಿಸಿಕೊಳ್ಳಬೇಕಿದ್ದ ಈ ಬಾಲಕಿಯು ಕಾಮುಕನೊಬ್ಬನ ದೌರ್ಜನ್ಯಕ್ಕೆ ಬಲಿಯಾಗಿದ್ದಾಳೆ. ಘಟನೆಯು ಬಾಲಕಿಯ ಮನೆಯಲ್ಲಿಯೇ ಸಂಭವಿಸಿದ್ದು, ಏಳು ತಿಂಗಳ ಗರ್ಭಾವಸ್ಥೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಸ್ಥಳೀಯ ಅಜ್ಜಿಯೊಬ್ಬರು ಬಾಲಕಿಗೆ ಹೆರಿಗೆ ಮಾಡಿದ್ದಾರೆ. ಜನ್ಮವಾದ ಗಂಡು ಮಗುವಿನ ತೂಕ 1.8 ಕೆ.ಜಿ. ಇದ್ದು, ತಾಯಿ ಮತ್ತು ಮಗು ಇಬ್ಬರನ್ನೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಸ್ತುತ, ತಾಯಿ ಮತ್ತು ಮಗು ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ, ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕಾಗಿ ಪೊಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪತ್ತೆಹಚ್ಚಲು ಶಿವಮೊಗ್ಗ ಎಸ್‌ಪಿ ಜಿ.ಕೆ. ಮಿಥುನ್ ಕುಮಾರ್ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ.
ಈ ಘಟನೆಯು ಶಿವಮೊಗ್ಗದ ಜನರಲ್ಲಿ ಆತಂಕವನ್ನುಂಟು ಮಾಡಿದೆ. ಕರ್ನಾಟಕದಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು, ಬಾಲಕಿಯರ ಸುರಕ್ಷತೆ ಮತ್ತು ಶಿಕ್ಷಣ ಸಂಸ್ಥೆಗಳ ಕಾಳಜಿಯ ಕೊರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಈ ಘಟನೆಯನ್ನು ಖಂಡಿಸಿರುವ ಕರ್ನಾಟಕ ರಾಜ್ಯ ಬಾಲ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೊಸಂಬೆ, ಪೊಲೀಸರು ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.