ಶಿವಮೊಗ್ಗ: ನಗರದ ಹೊರವಲಯದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಕಿಡಿಗೇಡಿಗಳು ಗಣಪತಿ ಮತ್ತು ನಾಗರ ಮೂರ್ತಿಗಳಿಗೆ ಕಾಲಿನಿಂದ ಒದ್ದು ವಿಕೃತಿ ಮಾಡಿದ ಘಟನೆ ನಡೆದಿದೆ. ಸ್ಥಳೀಯ ಕುಟುಂಬವೊಂದು ಪೂಜಿಸುತ್ತಿದ್ದ ಈ ಮೂರ್ತಿಗಳನ್ನು ದುಷ್ಕರ್ಮಿಗಳು ಚರಂಡಿಗೆ ಎಸೆದು ಪರಾರಿಯಾಗಿದ್ದಾರೆ.
ಘಟನೆಯ ಸ್ಥಳಕ್ಕೆ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ ನೀಡಿ, ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಬೇಕೆಂದು ಅವರು ಒತ್ತಾಯಿಸಿದರು. ಸ್ಥಳೀಯರು ಸಹ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಡ ಹೇರಿದರು.
ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರಿಂದ, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಯಿತು. ಎಸ್‌ಪಿ ಮಿಥುನ್ ಕುಮಾರ್, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಜನರಿಗೆ ಊಹಾಪೋಹಗಳನ್ನು ಹಬ್ಬಿಸದಂತೆ ಸೂಚನೆ ನೀಡಿದ್ದಾರೆ.
ಇಬ್ಬರು ಆರೋಪಿಗಳ ಬಂಧನ
ಸ್ಥಳೀಯರಿಂದ ಒದಗಿಸಲಾದ ವಿಡಿಯೋ ದೃಶ್ಯಾವಳಿಗಳ ಆಧಾರದ ಮೇಲೆ, ಗಣಪತಿ ಮತ್ತು ನಾಗರ ಮೂರ್ತಿಗಳಿಗೆ ವಿಕೃತಿ ಮಾಡಿದ ಇಬ್ಬರು ಅನ್ಯಕೋಮಿನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಎಸ್‌ಪಿ ಮಿಥುನ್ ಕುಮಾರ್ ಖಚಿತಪಡಿಸಿದ್ದಾರೆ.