ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಕೊಲೆ ಪ್ರಕರಣಕ್ಕೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ. ಪರಿಹಾರ ಘೋಷಣೆ

BeFunky collage 2026 02 24T134331.238

ಶಿವಮೊಗ್ಗದಲ್ಲಿ ದುರದೃಷ್ಟಕರವಾಗಿ ಕೊಲೆಯಾದ ಅಪ್ರಾಪ್ತ ಬಾಲಕನ ಕುಟುಂಬಕ್ಕೆ ರಾಜ್ಯ ಸರ್ಕಾರವು ₹15 ಲಕ್ಷ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಪರಿಹಾರ ಸೂಚಿಸಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇದನ್ನು ಅಧಿಕೃತವಾಗಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಮಾತನಾಡಿ, “ಅಪ್ರಾಪ್ತ ಬಾಲಕನ ಸಾವಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹10 ಲಕ್ಷ ಹಾಗೂ ಶಿಕ್ಷಣ ಇಲಾಖೆಯಿಂದ ₹5 ಲಕ್ಷ ಸೇರಿ ಒಟ್ಟು ₹15 ಲಕ್ಷ ನೀಡಲಾಗುವುದು” ಎಂದು ತಿಳಿಸಿದರು.

ಘಟನೆಯ ನಂತರ ಜಿಲ್ಲೆಯಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಘಟನೆ ನಡೆದ ಬಡಾವಣೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಡ್ರಗ್ಸ್ (ಗಾಂಜಾ) ಸೇವನೆ ಮತ್ತು ಮಾರಾಟದ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಲಾಗಿದೆ. ಗಾಂಜಾ ವಿರುದ್ಧ ಸಮರ ಸಾರಲಾಗಿದ್ದು, ಈ ಪ್ರಕರಣದಲ್ಲಿ ಸಂಬಂಧಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಜಾತ್ರೆಗಳು ಮತ್ತು ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದೆ. ಊರುಗಡೂರು ಭಾಗದಲ್ಲಿ ಔಟ್ ಪೋಸ್ಟ್ ತೆರೆದು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಈ ಘಟನೆಯು ಜಿಲ್ಲೆಯಲ್ಲಿ ಆತಂಕ ಮೂಡಿಸಿದ್ದು, ಯುವಕರಲ್ಲಿ ಡ್ರಗ್ಸ್ ಸೇವನೆಯ ವಿರುದ್ಧ ಜಾಗೃತಿ ಮೂಡಿಸುವ ಅಗತ್ಯವನ್ನು ಎತ್ತಿ ತೋರಿಸಿದೆ. ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

Exit mobile version