ಸಿದ್ದರಾಮಯ್ಯ ವಿರುದ್ಧ ಅಶ್ಲೀಲ ಕಾಮೆಂಟ್: ಕಿಡಿಗೇಡಿಗಳ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ!

Add a heading (15)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ ಸುದ್ದಿಯ ಫೇಸ್‌ಬುಕ್ ಪೋಸ್ಟ್‌ಗೆ ಅವಹೇಳನಕಾರಿ ಕಾಮೆಂಟ್‌ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಒತ್ತಾಯಿಸಿದೆ. ಕೆಲವರು ಮುಖ್ಯಮಂತ್ರಿಯವರ ಸಾವನ್ನು ಬಯಸಿ ಅಶ್ಲೀಲ ಪದಗಳೊಂದಿಗೆ ಕಾಮೆಂಟ್‌ ಮಾಡಿದ್ದಾರೆ ಎಂದು ಆರೋಪಿಸಿ, ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿಯು ಪೀಣ್ಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದೆ.

ಸಿದ್ದರಾಮಯ್ಯ ಅವರು ಜುಲೈ 7ರಂದು ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಭೇಟಿ ನೀಡಿದ್ದರು. ಈ ಸುದ್ದಿಯನ್ನು ಖಾಸಗಿ ವಾಹಿನಿಯೊಂದು “ದಿಢೀರ್ ಆಸ್ಪತ್ರೆಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ” ಎಂದು ಪ್ರಕಟಿಸಿತ್ತು. ಈ ಪೋಸ್ಟ್‌ಗೆ ಕೆಲವು ಕಿಡಿಗೇಡಿಗಳು ಅವಹೇಳನಕಾರಿ ಕಮೆಂಟ್‌ಗಳನ್ನು ಮಾಡಿದ್ದಾರೆ. ಈ ಕಮೆಂಟ್‌ಗಳು ರಾಜ್ಯದ ಜನತೆ, ಸಿದ್ದರಾಮಯ್ಯ ಅವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಮಾನಸಿಕ ನೋವು ಉಂಟುಮಾಡಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ADVERTISEMENT
ADVERTISEMENT

ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕುಶಾಲ್ ಹರುವೇಗೌಡ ಮತ್ತು ಸಂಜಯ್ ಎಂಬವರು ಸಲ್ಲಿಸಿದ ದೂರಿನಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿಯವರ ವಿರುದ್ಧ ಅಶ್ಲೀಲ ಹೇಳಿಕೆಗಳನ್ನು ಪೋಸ್ಟ್ ಮಾಡಿದವರನ್ನು ಗಂಭೀರವಾಗಿ ಪರಿಗಣಿಸಿ, ಪ್ರಕರಣ ದಾಖಲಿಸಿ, ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರಲಾಗಿದೆ. ಈ ಕಮೆಂಟ್‌ಗಳು ಕಾನೂನು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವುದರ ಜೊತೆಗೆ ಶಾಂತಿಗೆ ಭಂಗ ತರುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಂಬಂಧಿಸಿದ ಫೇಸ್‌ಬುಕ್ ಕಾಮೆಂಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ದೂರಿನೊಂದಿಗೆ ಲಗತ್ತಿಸಲಾಗಿದೆ.

ಇಂದು (ಜುಲೈ 8) ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ದಿನ ವಿಶ್ರಾಂತಿ ಪಡೆಯಲಿದ್ದಾರೆ. ಯಾವುದೇ ಸಭೆ, ಸಮಾರಂಭ ಅಥವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ ಎಂದು ಅವರ ಕಚೇರಿ ತಿಳಿಸಿದೆ. ಜುಲೈ 9ರಂದು ಅವರು ದೆಹಲಿಗೆ ತೆರಳಲಿದ್ದಾರೆ.

ಕಾಂಗ್ರೆಸ್ ಸಮಿತಿಯು, ಈ ರೀತಿಯ ಕಮೆಂಟ್‌ಗಳು ಸಾರ್ವಜನಿಕರಲ್ಲಿ ಗೊಂದಲ ಮತ್ತು ಭಯ ಉಂಟುಮಾಡುವುದರ ಜೊತೆಗೆ ರಾಜ್ಯದ ಶಾಂತಿಯ ವಾತಾವರಣಕ್ಕೆ ಧಕ್ಕೆ ತರುತ್ತವೆ ಎಂದು ಆರೋಪಿಸಿದೆ. ಆದ್ದರಿಂದ, ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ಮನವಿ ಮಾಡಿದೆ.

Exit mobile version