ತುಮಕೂರಿನಲ್ಲಿ ಕಂಟೇನರ್ ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು

Your paragraph text

ರಾಜ್ಯದಲ್ಲಿ ದಿನಂಪ್ರತಿ ಒಂದಲ್ಲ ಒಂದು ಅವಾಂತರ, ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಬೆನ್ನಲ್ಲೇ ಇದೀಗ ತುಮಕೂರು ಹೆದ್ದಾರಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 48ರ ನಂದಿಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಹೆದ್ದಾರಿಗೆ ಬರುತ್ತಿದ್ದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಒಂದೇ ಬೈಕ್‌ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಅಪಘಾತದ ತೀವ್ರತೆ ಹೆಚ್ಚಾಗಿದ್ದ ಕಾರಣ ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 48ರ ಹಿರೇಹಳ್ಳಿ ಸಮೀಪದ ನಂದಿಹಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಂಟೇನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರನ್ನು ರಾಜೇಶ್ (25), ದನಂಜಯ್ (27), ಮತ್ತು ಧನುಷ್ (23) ಎಂದು ಗುರುತಿಸಲಾಗಿದೆ. ಇವರು ದಾಬಸ್‌ಪೇಟೆಯ ಖಾಸಗಿ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ರಾತ್ರಿಯ ಕರ್ತವ್ಯ ಮುಗಿಸಿ ತುಮಕೂರಿಗೆ ವಾಪಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಅಪಘಾತ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ  ಸಂಭವಿಸಿದ್ದು, ಬೈಕ್‌ನಲ್ಲಿ ಟ್ರಿಪಲ್ ರೈಡಿಂಗ್ ಮಾಡುತ್ತಿದ್ದ ಸವಾರರು ಪೆಟ್ರೋಲ್ ಬಂಕ್‌ನಿಂದ ಹೊರಡುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿಯಾಗಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಎಎಸ್‌ಪಿ ಗೋಪಾಲ್ ಮತ್ತು ಡಿವೈಎಸ್‌ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Exit mobile version