ಬೇಸಿಗೆ ರಜೆಯ ಮೋಜಿನಲ್ಲಿದ್ದ ಶಿವಮೊಗ್ಗದ ಕಾಲೇಜು ವಿದ್ಯಾರ್ಥಿಗಳ ಪ್ರವಾಸವು ದಾರುಣ ಅಂತ್ಯ ಕಂಡಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಡೆದಿದ್ದೇನು?
ಶಿವಮೊಗ್ಗದ ಶಂಕರಘಟ್ಟದ ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಪ್ರವಾಸಕ್ಕಾಗಿ ಆಗಮಿಸಿದ್ದರು. ಮುರುಡೇಶ್ವರದ ದರ್ಶನ ಮುಗಿಸಿ ಉಡುಪಿಯತ್ತ ತೆರಳುತ್ತಿದ್ದ ವೇಳೆ, ತ್ರಾಸಿ ಬೀಚ್ ಸಮೀಪದ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ಗೆ ಮೊದಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ನಂತರ ಪಕ್ಕದಲ್ಲಿದ್ದ ಟ್ರಕ್ಗೂ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ.
ಸ್ಥಳದಲ್ಲೇ ಇಬ್ಬರು ಸಾವು
ಈ ಭೀಕರ ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಬಸ್ಸಿನಲ್ಲಿ ಒಟ್ಟು 47 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡಿರುವ ಹಲವು ವಿದ್ಯಾರ್ಥಿಗಳನ್ನು ತಕ್ಷಣವೇ ಕುಂದಾಪುರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ರಕ್ಷಣಾ ಕಾರ್ಯಾಚರಣೆ ಮತ್ತು ತನಿಖೆ
ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಗಾಯಾಳುಗಳನ್ನು ಬಸ್ಸಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ಸ್ಥಳೀಯರು ದೊಡ್ಡ ಮಟ್ಟದ ನೆರವು ನೀಡಿದರು. ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಲಕನ ನಿರ್ಲಕ್ಷ್ಯ ಅಥವಾ ತಾಂತ್ರಿಕ ದೋಷದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
ವಿದ್ಯಾರ್ಥಿಗಳ ಸಾವು ಮತ್ತು ಗಾಯಾಳುಗಳ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಹಾಗೂ ಕಾಲೇಜು ಮಂಡಳಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
