ಯಾದಗಿರಿ: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪ ಎದುರಿಸುತ್ತಿರುವ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾಗೆ ನ್ಯಾಯಾಲಯ ಬಿಗ್ ಶಾಕ್ ನೀಡಿದೆ. ಮುತ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಯಾದಗಿರಿ ಜಿಲ್ಲಾ ಪ್ರಧಾನ ಮತ್ತು ವಿಶೇಷ ಸತ್ರ ನ್ಯಾಯಾಲಯವು ಇಂದು (ಮಾರ್ಚ್ 9) ವಜಾ ಮಾಡಿದೆ.
ಕೋರ್ಟ್‌ನಲ್ಲಿ ನಡೆದಿದ್ದೇನು ?
ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ (POCSO) ಪ್ರಕರಣದಲ್ಲಿ ಬಂಧನದಿಂದ ತಪ್ಪಿಸಿಕೊಳ್ಳಲು ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು, ಸರ್ಕಾರಿ ವಕೀಲರ ಆಕ್ಷೇಪಣೆ ಮತ್ತು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಜಾಮೀನು ನೀಡಲು ನಿರಾಕರಿಸಿದ್ದಾರೆ. ಕಳೆದ ಶುಕ್ರವಾರವಷ್ಟೇ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯವು ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.
ವಿಶೇಷವೆಂದರೆ, ಮುತ್ಯಾ ಮೊದಲು ಪ್ರಕರಣ ರದ್ದು ಕೋರಿ ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಅರ್ಜಿಯನ್ನು ಏಕಾಏಕಿ ವಾಪಸ್ ಪಡೆದು ಜಿಲ್ಲಾ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಈಗ ಇಲ್ಲಿಯೂ ಅರ್ಜಿ ವಜಾಗೊಂಡಿರುವುದರಿಂದ ಮುತ್ಯಾ ಅನಿವಾರ್ಯವಾಗಿ ಮತ್ತೆ ಹೈಕೋರ್ಟ್ ಮೆಟ್ಟಿಲೇರಬೇಕಿದೆ.
ತನಿಖೆ ಚುರುಕು
ಪ್ರಕರಣದ ತನಿಖಾಧಿಕಾರಿಯಾಗಿರುವ ಶಹಪೂರ ಸಿಪಿಐ ಶರಣಗೌಡ ನಾಮಣ್ಣವರ ಅವರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ವಿಚಾರಣೆ ವೇಳೆ ಮಲ್ಲಿಕಾರ್ಜುನ ಮುತ್ಯಾ ಬಳಸುತ್ತಿದ್ದ ನಾಲ್ಕು ಮೊಬೈಲ್ ಫೋನ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಮೊಬೈಲ್‌ಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಡಿಜಿಟಲ್ ಸಾಕ್ಷ್ಯಗಳು, ವಿಡಿಯೋಗಳು ಅಥವಾ ಚಾಟ್‌ಗಳು ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಮೊಬೈಲ್‌ಗಳನ್ನು ತಾಂತ್ರಿಕ ಪರಿಶೀಲನೆಗಾಗಿ ಕಳುಹಿಸಲಾಗಿದೆ.
ಏನಿದು ಘಟನೆ ?
ಫೆಬ್ರವರಿ ತಿಂಗಳಲ್ಲಿ ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಬ್ಬಳೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಇದು ಸಾರ್ವಜನಿಕ ವಲಯದಲ್ಲಿ ದೊಡ್ಡ ಆಕ್ರೋಶಕ್ಕೆ ಕಾರಣವಾಗಿತ್ತು. ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಈ ಬಗ್ಗೆ ಕಠಿಣ ಕ್ರಮಕ್ಕೆ ಸೂಚಿಸಿದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳ ಆದೇಶದಂತೆ ಫೆಬ್ರವರಿ 25ರಂದು ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾಗುತ್ತಿದ್ದಂತೆಯೇ ಮುತ್ಯಾ ನಾಪತ್ತೆಯಾಗಿದ್ದರು. ನಂತರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇನ್ನೊಂದೆಡೆ ಮುತ್ಯಾ ಬೆಂಬಲಿಗರು ಮತ್ತು ಕೋಲಿ ಸಮಾಜದ ಕೆಲವು ಮುಖಂಡರು ಇದು ಪಿತೂರಿ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರು.
