ಯಾದಗಿರಿ ಸೆ. 18: ರಾಜ್ಯದಲ್ಲಿ ಮಳೆ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಬರಗಾಲದ ಪರಿಸ್ಥಿತಿ ತೀವ್ರವಾಗಿದ್ದು, ಯಾದಗಿರಿ ಜಿಲ್ಲೆಯಲ್ಲೂ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಕೈಕೊಟ್ಟ ಪರಿಣಾಮ ಕೆರೆಗಳು ಬತ್ತಿಹೋಗಿದ್ದು, ಬೆಳೆಗಳು ಒಣಗುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬತ್ತಿಹೋದ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲದೊಂದಿಗೆ ರೈತರ ಧರಣಿ ನಾಲ್ಕನೇ ದಿನವೂ ಮುಂದುವರಿದಿದೆ. ಬದ್ದೆಪಲ್ಲಿ ಹಾಗೂ ಮಲ್ಕಪನಳ್ಳಿ ಕೆರೆಗಳಿಗೆ ನೀರು ತುಂಬಿಸುವಂತೆ ರೈತರು ಒತ್ತಾಯಿಸಿದ್ದಾರೆ. ಸನ್ನತ್ತಿ ಏತ ನೀರಾವರಿ ಯೋಜನೆಯ ಮೂಲಕ ಭೀಮಾನದಿಯಿಂದ ಈ ಕೆರೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿದ್ದಾರೆ.
ಒಣಗುತ್ತಿರುವ ಬೆಳೆಗಳಿಗೆ ನೀರು ಒದಗಿಸುವುದರ ಜೊತೆಗೆ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ತಮ್ಮ ಬೇಡಿಕೆ ಈಡೇರುವವರೆಗೆ ಧರಣಿ ಮುಂದುವರಿಸುವುದಾಗಿ ಪ್ರತಿಭಟನಾಕಾರರು ಹೇಳಿದ್ದಾರೆ.
ಈ ನಡುವೆ ಧರಣಿ ನಿರತ ರೈತರೊಬ್ಬರು ಅಸ್ವಸ್ಥಗೊಂಡಿದ್ದು, ಅವರನ್ನು ಯಾದಗಿರಿಯ ಯೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನೀರಿಗಾಗಿ ಹೋರಾಟ ತೀವ್ರಗೊಂಡ ಸಂದರ್ಭದಲ್ಲಿ ಕೆಲವು ರೈತರು ಜಿಲ್ಲಾಧಿಕಾರಿ ಕಚೇರಿಗೆ ಬೀಗ ಹಾಕಲು ಮುಂದಾದರು. ಕೈಯಲ್ಲಿ ಸರಪಳಿ ಹಿಡಿದುಕೊಂಡು ಕಚೇರಿಯತ್ತ ತೆರಳುತ್ತಿದ್ದ ರೈತರನ್ನು ಪೊಲೀಸರು ತಡೆದರು. ಈ ವೇಳೆ ರೈತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಇನ್ನು ಪ್ರತಿಭಟನಾ ಸ್ಥಳದಲ್ಲಿ ರೈತ ಮಹಿಳೆಯೊಬ್ಬರು ಕಣ್ಣೀರಿಟ್ಟು ತಮ್ಮ ಅಳಲು ತೋಡಿಕೊಂಡಿದ್ದಾರೆ. “ಕೆರೆಗೆ ನೀರು ಹರಿಸದಿದ್ದರೆ ನಾವು ಇಲ್ಲಿಯೇ ವಿಷ ಸೇವಿಸಿ ಸಾಯುತ್ತೇವೆ. ನೀರು ಕೊಡಿ, ಇಲ್ಲದಿದ್ದರೆ ವಿಷ ಕೊಡಿ” ಎಂದು ಧರಣಿ ನಿರತ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬರದಿಂದ ಬೆಳೆ ಹಾಗೂ ಜಾನುವಾರುಗಳನ್ನು ಉಳಿಸಿಕೊಳ್ಳಲು ತಕ್ಷಣ ಕೆರೆಗಳಿಗೆ ನೀರು ಹರಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ರೈತರ ಸಮಸ್ಯೆಗೆ ಸ್ಪಂದಿಸಿ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿದೆ.
