ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 108 ಆಂಬುಲೆನ್ಸ್ ನೌಕರರು ಮತ್ತೆ ಪ್ರತಿಭಟನೆ ಆರಂಭಿಸಿದ್ದು, ಸರ್ಕಾರ ಹಾಗೂ ಸಂಬಂಧಪಟ್ಟ ಸಂಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಬೇಡಿಕೆಗಳನ್ನು 15 ದಿನಗಳೊಳಗೆ ಈಡೇರಿಸದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. ಇದರಿಂದ ರಾಜ್ಯದ ತುರ್ತು ಆರೋಗ್ಯ ಸೇವೆಗಳ ಮೇಲೆ ಪರಿಣಾಮ ಬೀರುವ ಆತಂಕವೂ ಎದುರಾಗಿದೆ.
ಪ್ರತಿ ವರ್ಷ 108 ಆಂಬುಲೆನ್ಸ್ ಸಿಬ್ಬಂದಿ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಾರಿಯೂ ತಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಸಿಬ್ಬಂದಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಸಿಬ್ಬಂದಿಯ ಪ್ರಮುಖ ಬೇಡಿಕೆಗಳಲ್ಲಿ ಪ್ರತಿ ವರ್ಷ ವೇತನ ಪರಿಷ್ಕರಣೆ ಮಾಡುವುದು, ಜೇಷ್ಠತೆ ಆಧಾರದ ಮೇಲೆ ವೇತನ ನಿಗದಿ ಮಾಡುವುದು ಹಾಗೂ ಕಾರ್ಮಿಕ ಇಲಾಖೆ ನಿಯಮದಂತೆ ಪ್ರತಿ ತಿಂಗಳ 7ರೊಳಗೆ ವೇತನ ಪಾವತಿಸುವುದು ಪ್ರಮುಖವಾಗಿವೆ. ಇದರ ಜೊತೆಗೆ ಸಿಬ್ಬಂದಿಗೆ ಸೂಕ್ತ ವಿಶ್ರಾಂತಿ ಕೊಠಡಿಗಳ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ.
108 ಆಂಬುಲೆನ್ಸ್ ಸೇವೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಮೂರು ಪಾಳಿಗಳಲ್ಲಿ ಕೆಲಸ ಮಾಡುವಂತೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ನೌಕರರು ಆಗ್ರಹಿಸಿದ್ದಾರೆ. ಪ್ರಸ್ತುತ ವಲಯವಾರು ವಿಂಗಡಣೆ ಆಧಾರದ ಮೇಲೆ ನಿಗದಿಪಡಿಸಲಾಗಿರುವ ವೇತನ ವ್ಯವಸ್ಥೆಯನ್ನು ರದ್ದುಪಡಿಸಿ, ಏಕರೂಪ ವಲಯದ ಆಧಾರದ ಮೇಲೆ ವೇತನ ನಿಗದಿ ಮಾಡಬೇಕು ಎಂಬುದು ಸಿಬ್ಬಂದಿಯ ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ.
ಅಪಘಾತ ಸೇರಿದಂತೆ ಕರ್ತವ್ಯದ ವೇಳೆ ಮೃತಪಟ್ಟ ಸಿಬ್ಬಂದಿಯ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂಬ ಬೇಡಿಕೆಯನ್ನೂ ನೌಕರರು ಮುಂದಿಟ್ಟಿದ್ದಾರೆ. ತಮ್ಮ ಸೇವೆಯ ಸ್ವರೂಪ ಹಾಗೂ ಅಪಾಯಗಳನ್ನು ಪರಿಗಣಿಸಿ ಸರ್ಕಾರ ಮತ್ತು ಸಂಬಂಧಪಟ್ಟ ಸಂಸ್ಥೆ ಸಿಬ್ಬಂದಿಯ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ನಡುವೆ 108 ಆಂಬುಲೆನ್ಸ್ ಸಿಬ್ಬಂದಿ ಸಾಮೂಹಿಕ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಸಿಬ್ಬಂದಿ ತಮ್ಮ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸುವುದಕ್ಕೆ ಆಕ್ಷೇಪವಿಲ್ಲ. ಆದರೆ ಪ್ರತಿಭಟನೆಯಿಂದ ರೋಗಿಗಳಿಗೆ ತೊಂದರೆಯಾದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
108 ಆಂಬುಲೆನ್ಸ್ ವಾಹನಗಳ ನಿರ್ವಹಣೆ ಸರ್ಕಾರ ಅಥವಾ ಆರೋಗ್ಯ ಇಲಾಖೆಯ ನೇರ ಜವಾಬ್ದಾರಿಯಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಆಂಬುಲೆನ್ಸ್ ಸೇವೆಯನ್ನು ನಿರ್ವಹಿಸುವುದು ಸಂಬಂಧಪಟ್ಟ ಕಂಪನಿಯಾಗಿದ್ದು, ಸಿಬ್ಬಂದಿಯ ವೇತನ ಸೇರಿದಂತೆ ಹಲವು ಜವಾಬ್ದಾರಿಗಳನ್ನು ಕಂಪನಿಯೇ ನಿರ್ವಹಿಸುತ್ತದೆ ಎಂದು ತಿಳಿಸಿದ್ದಾರೆ.
ಚಾಲಕರು ಅಥವಾ ಸಿಬ್ಬಂದಿಗೆ ವೇತನ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೆ ಮೊದಲು ಸಂಬಂಧಪಟ್ಟ ಕಂಪನಿಯೊಂದಿಗೆ ಮಾತುಕತೆ ನಡೆಸಬೇಕು. ಕಂಪನಿಯಿಂದ ಸಮಸ್ಯೆ ಬಗೆಹರಿಯದಿದ್ದರೆ ಸರ್ಕಾರದ ಗಮನಕ್ಕೆ ತರಬಹುದು ಎಂದು ಸಚಿವರು ಹೇಳಿದ್ದಾರೆ.
ಸಿಬ್ಬಂದಿಯನ್ನು ನಿರ್ವಹಿಸಲು ಕಂಪನಿಗೆ ಸಾಧ್ಯವಾಗದಿದ್ದರೆ, ಆ ಕಂಪನಿ ಸೇವೆಯಿಂದ ಹಿಂದೆ ಸರಿಯಬಹುದು. ಅಗತ್ಯವಿದ್ದರೆ ಸರ್ಕಾರ ಹೊಸ ಕಂಪನಿಗೆ ಟೆಂಡರ್ ನೀಡುವ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.
108 ಆಂಬುಲೆನ್ಸ್ ಸಿಬ್ಬಂದಿ ತಮ್ಮ ಸಹೋದರರಿದ್ದಂತೆ ಎಂದು ಹೇಳಿದ ಸಚಿವರು, ಅವರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ ಎಂದಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ರೋಗಿಗಳ ಆರೋಗ್ಯ ಮತ್ತು ತುರ್ತು ಸೇವೆಗೆ ಧಕ್ಕೆಯಾಗಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಷ್ಕರ ಅಥವಾ ಪ್ರತಿಭಟನೆಯ ಸಂದರ್ಭದಲ್ಲಿ ರೋಗಿಗಳಿಗೆ ತುರ್ತು ನೆರವು ಸಿಗದೆ ಸಮಸ್ಯೆ ಉಂಟಾದರೆ, ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ.





