ದಾವಣಗೆರೆ: ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ ಅಂದರೆ AI ತಂತ್ರಜ್ಞಾನ ಬಳಕೆ ಹೆಚ್ಚಾಗುತ್ತಿದೆ. ಫೋಟೋ, ವಿಡಿಯೋ ಸೇರಿದಂತೆ ಹಲವು ರೀತಿಯ ದೃಶ್ಯಗಳನ್ನು ಕೆಲವೇ ಕ್ಷಣಗಳಲ್ಲಿ ಸೃಷ್ಟಿಸಲು AI ನೆರವಾಗುತ್ತಿದೆ. ಆದರೆ ಇದೇ ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ಸುಳ್ಳು ಸುದ್ದಿಗಳನ್ನು ಹರಡುವ ಪ್ರಕರಣಗಳೂ ಹೆಚ್ಚಾಗುತ್ತಿವೆ. ಇದೀಗ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನಲ್ಲಿ ಮೋಜಿಗಾಗಿ AI ಬಳಸಿ ಚಿರತೆಯ ನಕಲಿ ಫೋಟೋ ಸೃಷ್ಟಿಸಿ, ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪ ಕೇಳಿಬಂದಿದೆ.
ಹರಿಹರ ತಾಲೂಕಿನ ವಾಸನ ಗ್ರಾಮದ ಸುನೀಲ್ (22) ಎಂಬ ಯುವಕ ನಂದೀಶ್ವರ ಕ್ಯಾಂಪ್ನ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಿ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಎನ್ನಲಾಗಿದೆ. ಚಿರತೆಯ ಫೋಟೋ ವೈರಲ್ ಆಗುತ್ತಿದ್ದಂತೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಕೆಲವೇ ಸಮಯದಲ್ಲಿ ಈ ಫೋಟೋ ದಾವಣಗೆರೆ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಿದಾಡಿತ್ತು.
ಚಿರತೆ ಇದೆ ಎಂಬ ಸುದ್ದಿ; ಸ್ಥಳಕ್ಕೆ ಅರಣ್ಯಾಧಿಕಾರಿಗಳು
ಸಾಮಾಜಿಕ ಜಾಲತಾಣದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಹರಡುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಎಚ್ಚೆತ್ತುಕೊಂಡಿದ್ದರು. ಮಾಹಿತಿ ಆಧರಿಸಿ ಅಧಿಕಾರಿಗಳು ನಂದೀಶ್ವರ ಕ್ಯಾಂಪ್ನ ತೋಟ ಸೇರಿದಂತೆ ಸಂಬಂಧಪಟ್ಟ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಚಿರತೆ ಓಡಾಡಿರುವ ಬಗ್ಗೆ ಯಾವುದೇ ಸ್ಪಷ್ಟ ಸುಳಿವು ಸಿಗುತ್ತದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಆದರೆ ಸ್ಥಳದಲ್ಲಿ ಚಿರತೆಯ ಹೆಜ್ಜೆ ಗುರುತು ಸೇರಿದಂತೆ ಯಾವುದೇ ಪ್ರಮುಖ ಸಾಕ್ಷ್ಯಗಳು ಪತ್ತೆಯಾಗದ ಹಿನ್ನೆಲೆ ಅಧಿಕಾರಿಗಳಿಗೆ ಅನುಮಾನ ಮೂಡಿದೆ ಎನ್ನಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಫೋಟೋ ನಿಜವೇ ಅಥವಾ ನಕಲಿಯೇ ಎಂಬುದರ ಬಗ್ಗೆಯೂ ಪರಿಶೀಲನೆ ಆರಂಭಿಸಲಾಯಿತು. ಈ ಬೆಳವಣಿಗೆಯ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಚಾರಣೆ ವೇಳೆ AI ಫೋಟೋ ರಹಸ್ಯ ಬಯಲು
ಅರಣ್ಯಾಧಿಕಾರಿಗಳ ದೂರಿನ ಹಿನ್ನೆಲೆಯಲ್ಲಿ ಚಿರತೆಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು, ವಾಸನ ಗ್ರಾಮದ ಸುನೀಲ್ ಎಂಬ ಯುವಕನನ್ನು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ವೈರಲ್ ಆಗಿದ್ದ ಚಿರತೆಯ ಫೋಟೋವನ್ನು AI ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿತ್ತು ಎಂದು ಸುನೀಲ್ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಮೋಜಿಗಾಗಿ AI ಮೂಲಕ ಚಿರತೆಯ ನಕಲಿ ಫೋಟೋ ಸೃಷ್ಟಿಸಿ, ತೋಟದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ರೀತಿಯಲ್ಲಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಗಿ ಆತ ತಿಳಿಸಿದ್ದಾನೆ ಎನ್ನಲಾಗಿದೆ.
ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಫೋಟೋ ನಿಜವಾದ ಚಿರತೆಯದ್ದಲ್ಲ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.
ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಿದ ಪೊಲೀಸರು
AI ಮೂಲಕ ನಕಲಿ ಫೋಟೋ ಸೃಷ್ಟಿಸಿ ಸುಳ್ಳು ಸುದ್ದಿ ಹರಡಿದ್ದ ಆರೋಪದ ಹಿನ್ನೆಲೆ ಪೊಲೀಸರು ಯುವಕನಿಗೆ ವಿಚಾರಣೆ ನಡೆಸಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಬಳಿಕ ಆತನನ್ನು ಬಿಟ್ಟು ಕಳುಹಿಸಲಾಗಿದೆ.
ಆದರೆ, ಈ ಒಂದು ನಕಲಿ ಫೋಟೋದಿಂದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಅನಗತ್ಯವಾಗಿ ಕಾರ್ಯಾಚರಣೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಚಿರತೆ ಕಾಣಿಸಿಕೊಂಡಿದೆ ಎಂಬ ಮಾಹಿತಿ ಬಂದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಬೋನು ಇಡುವಂತಾಗಿದೆ.
AI ಬಳಕೆಯಲ್ಲಿ ಎಚ್ಚರಿಕೆ ಅಗತ್ಯ
AI ತಂತ್ರಜ್ಞಾನದಿಂದ ನಕಲಿ ಫೋಟೋಗಳು ಹಾಗೂ ವಿಡಿಯೋಗಳನ್ನು ಸುಲಭವಾಗಿ ಸೃಷ್ಟಿಸಬಹುದಾಗಿರುವುದರಿಂದ ಸಾಮಾಜಿಕ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸುವ ಅಗತ್ಯವಿದೆ. ಯಾವುದೇ ಫೋಟೋ ಅಥವಾ ಸುದ್ದಿಯನ್ನು ಪರಿಶೀಲಿಸದೆ ಹಂಚಿಕೊಳ್ಳುವುದರಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಬಹುದು.




