ಗ್ರೇಟರ್ ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಏಕಾಏಕಿ ಭಾರೀ ಬೆಂಕಿ ಹೊತ್ತಿಕೊಂಡು ಭೀಕರ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಪರಿಣಾಮ ಕನಿಷ್ಠ 9 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ.
ಘಟನೆ ನಡೆದ ವೇಳೆ ಸ್ಲೀಪರ್ ಬಸ್‌ನಲ್ಲಿ ಸುಮಾರು 40ರಿಂದ 50 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಬಸ್ ಚಲಿಸುತ್ತಿದ್ದ ಸಂದರ್ಭದಲ್ಲೇ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಬಸ್‌ನ ಬಹುತೇಕ ಭಾಗಕ್ಕೆ ವೇಗವಾಗಿ ಆವರಿಸಿಕೊಂಡಿದೆ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ.
ಬೆಂಕಿ ತೀವ್ರವಾಗಿ ಹರಡುತ್ತಿದ್ದಂತೆ ಕೆಲವು ಪ್ರಯಾಣಿಕರು ತಮ್ಮ ಪ್ರಾಣ ಉಳಿಸಿಕೊಳ್ಳಲು ಚಲಿಸುತ್ತಿದ್ದ ಬಸ್‌ನಿಂದಲೇ ಹೊರಕ್ಕೆ ಜಿಗಿದಿದ್ದಾರೆ. ಈ ವೇಳೆ ಕೆಲವರು ಗಾಯಗೊಂಡಿರುವ ಸಾಧ್ಯತೆಯಿದೆ. ಮತ್ತೊಂದೆಡೆ, ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಕೆಲವು ಪ್ರಯಾಣಿಕರಿಗೆ ಬಸ್‌ನಿಂದ ಹೊರಬರಲು ಸಾಧ್ಯವಾಗಿಲ್ಲ ಎನ್ನಲಾಗಿದೆ.
ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಸ್‌ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ಬಸ್‌ನಲ್ಲಿ ಕೂಲ್‌ಡೌನ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೆಂಕಿ ಸಂಪೂರ್ಣವಾಗಿ ನಂದಿದ ಬಳಿಕ ಬಸ್‌ನೊಳಗೆ ಪರಿಶೀಲನೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.
ಬಸ್‌ನೊಳಗೆ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕೂಲ್‌ಡೌನ್ ಕಾರ್ಯಾಚರಣೆ ಪೂರ್ಣಗೊಂಡ ನಂತರ ಬಸ್‌ನೊಳಗೆ ಸಂಪೂರ್ಣ ಶೋಧ ನಡೆಸಲಾಗುತ್ತದೆ. ಈ ಕಾರ್ಯಾಚರಣೆ ಬಳಿಕವೇ ಮೃತಪಟ್ಟವರು ಹಾಗೂ ಗಾಯಗೊಂಡವರ ಕುರಿತು ಹೆಚ್ಚಿನ ಸ್ಪಷ್ಟ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
ಘೋರ ದುರಂತದ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಹಿತಿ ಪಡೆದುಕೊಂಡಿದ್ದು, ಮೃತಪಟ್ಟವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಗೊಂಡಿರುವ ಪ್ರಯಾಣಿಕರಿಗೆ ಸೂಕ್ತ ಹಾಗೂ ತ್ವರಿತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮುಖ್ಯಮಂತ್ರಿಗಳ ಕಚೇರಿ (CMO) ನೀಡಿರುವ ಮಾಹಿತಿಯ ಪ್ರಕಾರ, ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಸ್ಥರೊಂದಿಗೆ ಮಾತನಾಡಿ, ಅವರಿಗೆ ಸಾಧ್ಯವಿರುವ ಎಲ್ಲ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.





