ದುಬೈ, ಜುಲೈ 14: ಹಾರ್ಮುಜ್ ಜಲಸಂಧಿಯ (Strait of Hormuz) ದಕ್ಷಿಣದ ಹಡಗು ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಯುಎಇ (UAE) ಧ್ವಜ ಹೊಂದಿದ್ದ ಎರಡು ತೈಲ ಟ್ಯಾಂಕರ್‌ಗಳ ಮೇಲೆ ಇರಾನ್ ಕ್ರೂಸ್ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಒಬ್ಬ ಭಾರತೀಯ ಸಿಬ್ಬಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ 6 ಮಂದಿ ಭಾರತೀಯರು ಮತ್ತು 2 ಮಂದಿ ಉಕ್ರೇನ್ ಪ್ರಜೆಗಳು ಎಂದು ಯುಎಇ ರಕ್ಷಣಾ ಸಚಿವಾಲಯ ದೃಢಪಡಿಸಿದೆ.
ಮಾಹಿತಿಯ ಪ್ರಕಾರ, ಒಮಾನ್ ಜಲಪ್ರದೇಶದ ವ್ಯಾಪ್ತಿಯಲ್ಲಿರುವ ಹಾರ್ಮುಜ್ ಜಲಸಂಧಿಯ ದಕ್ಷಿಣ ಭಾಗದಲ್ಲಿ ಸಂಚರಿಸುತ್ತಿದ್ದ ಯುಎಇಗೆ ಸೇರಿದ ‘ಮೊಂಬಾಸಾ’ (Mombasa) ಮತ್ತು ‘ಅಲ್ ಬಹಿಯಾ’ (Al Bahiyah) ಎಂಬ ಎರಡು ರಾಷ್ಟ್ರೀಯ ತೈಲ ಟ್ಯಾಂಕರ್‌ಗಳ ಮೇಲೆ ಕ್ಷಿಪಣಿ ದಾಳಿ ನಡೆದಿದೆ.
ದಾಳಿಯ ಪರಿಣಾಮ ‘ಮೊಂಬಾಸಾ’ ಟ್ಯಾಂಕರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಗೆ ಒಟ್ಟು ಎಂಟು ಮಂದಿ ಗಾಯಗೊಂಡಿದ್ದು, ಅವರಲ್ಲಿ ಆರು ಮಂದಿ ಭಾರತೀಯರು ಹಾಗೂ ಇಬ್ಬರು ಉಕ್ರೇನ್ ಪ್ರಜೆಗಳಾಗಿದ್ದಾರೆ. ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ಷಿಪಣಿ ದಾಳಿಯಿಂದ ಎರಡೂ ಟ್ಯಾಂಕರ್‌ಗಳಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಹಡಗುಗಳ ಕೆಲವು ಭಾಗಗಳಿಗೆ ಹಾನಿಯಾಗಿದೆ. ತುರ್ತು ರಕ್ಷಣಾ ಸಿಬ್ಬಂದಿ ಮತ್ತು ಸಮುದ್ರ ಭದ್ರತಾ ತಂಡಗಳು ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ. ಗಾಯಾಳುಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾರ್ಮುಜ್ ಜಲಸಂಧಿ ವಿಶ್ವದ ಅತಿ ಮಹತ್ವದ ತೈಲ ಸಾಗಣೆ ಮಾರ್ಗಗಳಲ್ಲಿ ಒಂದಾಗಿದೆ. ಜಾಗತಿಕ ತೈಲ ರಫ್ತಿನ ದೊಡ್ಡ ಪ್ರಮಾಣ ಈ ಸಮುದ್ರ ಮಾರ್ಗದ ಮೂಲಕವೇ ಸಾಗುವುದರಿಂದ ಇಲ್ಲಿ ನಡೆಯುವ ಯಾವುದೇ ದಾಳಿ ಅಥವಾ ಸಂಘರ್ಷ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಬೆಳವಣಿಗೆಯಿಂದ ಅಂತರರಾಷ್ಟ್ರೀಯ ವಾಣಿಜ್ಯ ಮತ್ತು ಇಂಧನ ಭದ್ರತೆ ಕುರಿತ ಆತಂಕ ಮತ್ತೆ ಹೆಚ್ಚಾಗಿದೆ.
ಘಟನೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಯುಎಇ ಸರ್ಕಾರ, ಇದು ಅಂತರರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆ ಎಂದು ಖಂಡಿಸಿದೆ. ಸಮುದ್ರ ಮಾರ್ಗಗಳ ಸುರಕ್ಷತೆಯನ್ನು ಅಪಾಯಕ್ಕೆ ತಳ್ಳುವ ಇಂತಹ ಪ್ರಚೋದನಾರಹಿತ ದಾಳಿಗಳು ಜಾಗತಿಕ ಶಾಂತಿ ಮತ್ತು ಪ್ರಾದೇಶಿಕ ಸ್ಥಿರತೆಗೆ ಧಕ್ಕೆ ಉಂಟುಮಾಡುತ್ತವೆ ಎಂದು ಹೇಳಿದೆ.
ಇದಲ್ಲದೆ, ಇಂತಹ ದಾಳಿಗಳನ್ನು ಇರಾನ್ ತಕ್ಷಣವೇ ನಿಲ್ಲಿಸಬೇಕು ಎಂದು ಯುಎಇ ಆಗ್ರಹಿಸಿದ್ದು, ತನ್ನ ರಾಷ್ಟ್ರೀಯ ಭದ್ರತೆ, ವಾಣಿಜ್ಯ ಹಿತಾಸಕ್ತಿಗಳು ಹಾಗೂ ಸಮುದ್ರ ಸಂಚಾರದ ಸುರಕ್ಷತೆಯನ್ನು ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಹಕ್ಕು ತನ್ನ ದೇಶಕ್ಕಿದೆ ಎಂದು ಸ್ಪಷ್ಟಪಡಿಸಿದೆ.
