ಕಠ್ಮಂಡು ಆ. 26: ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರ ಭಾಗದ ರಸುವಾ ಜಿಲ್ಲೆಯಲ್ಲಿ ಇಂದು ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ 16 ಮಂದಿ ಮೃತಪಟ್ಟಿದ್ದು, 105 ಭಾರತೀಯರು ಸೇರಿದಂತೆ 400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿದೆ. ಪ್ರವಾಹದ ರಭಸಕ್ಕೆ ನೂರಾರು ಮನೆಗಳು, ವಾಹನಗಳು, ಸೇತುವೆಗಳು ಹಾಗೂ ಹಲವು ಮೂಲಸೌಕರ್ಯ ಯೋಜನೆಗಳು ಕೊಚ್ಚಿಹೋಗಿವೆ ಎಂದು ತಿಳಿದು ಬಂದಿದೆ.
ಭಾರೀ ಪ್ರಮಾಣದ ನೀರು ಕೆಳಭಾಗದ ಪ್ರದೇಶಗಳತ್ತ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ನೇಪಾಳ ಗಡಿಗೆ ಹೊಂದಿಕೊಂಡಿರುವ ಬಿಹಾರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ನದಿ ಪಾತ್ರದ ಜನರಿಗೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಟಿಬೆಟ್‌ನಿಂದ ನುಗ್ಗಿದ ನೀರು
ಅಧಿಕಾರಿಗಳ ಪ್ರಕಾರ, ಇಂದು ಬುಧವಾರ ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಟಿಬೆಟ್ ಭಾಗದಿಂದ ಭೋಟೆ ಕೋಶಿ ನದಿಗೆ ಭಾರೀ ಪ್ರಮಾಣದ ನೀರು ನುಗ್ಗಿದೆ. ಪರಿಣಾಮ, ಟಿಮುರೆ ಹಾಗೂ ಸ್ಯಾಪ್ರು ಬೇಸಿ ಪ್ರದೇಶಗಳು ತೀವ್ರವಾಗಿ ಹಾನಿಗೊಳಗಾಗಿವೆ.
ಗೈರೋಂಗ್ ಗಡಿ ದಾಟುವ ಪ್ರದೇಶದ ಸಮೀಪ ಟಿಬೆಟ್ ಭಾಗದಲ್ಲೂ ಭೂಕುಸಿತ ಸಂಭವಿಸಿದ್ದು, ಹಲವು ಮಂದಿ ಮೃತಪಟ್ಟಿರುವ ಸಾಧ್ಯತೆಯಿದೆ. ಅನೇಕರು ನಾಪತ್ತೆಯಾಗಿದ್ದಾರೆ ಎಂದು ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪ್ರವಾಹಕ್ಕೆ ನಿಖರ ಕಾರಣ ಇನ್ನೂ ಖಚಿತವಾಗಿಲ್ಲ. ಟಿಬೆಟ್ ಭಾಗದಲ್ಲಿ ಭಾರೀ ಮಳೆಯಾಗಿರುವುದನ್ನು ಉಪಗ್ರಹ ಚಿತ್ರಗಳು ಸೂಚಿಸಿವೆ. ಇದೇ ವೇಳೆ ಹಿಮನದಿ ಸರೋವರ ಸ್ಫೋಟ (GLOF) ದಿಂದ ಏಕಾಏಕಿ ನೀರಿನ ಪ್ರಮಾಣ ಹೆಚ್ಚಾಗಿರಬಹುದೇ ಎಂಬ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಮನೆ, ಸೇತುವೆಗಳು ನೀರುಪಾಲು
ಪ್ರವಾಹದ ಭೀಕರತೆಯನ್ನು ತೋರಿಸುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ಸೇತುವೆಗಳು ಹಾಗೂ ಮನೆಗಳು ಕುಸಿದು ಬೀಳುತ್ತಿರುವ ದೃಶ್ಯಗಳು ಕಂಡುಬಂದಿವೆ. ಜೀವ ಉಳಿಸಿಕೊಳ್ಳಲು ಜನರು ಸುರಕ್ಷಿತ ಪ್ರದೇಶಗಳತ್ತ ಓಡುತ್ತಿರುವ ದೃಶ್ಯಗಳು ಆತಂಕ ಮೂಡಿಸಿವೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನೇಪಾಳ ಸರ್ಕಾರ ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಆದರೆ ನೀರಿನ ಮಟ್ಟ ಹೆಚ್ಚಿರುವುದರಿಂದ ಕೆಲವು ಪ್ರದೇಶಗಳಲ್ಲಿ ಹೆಲಿಕಾಪ್ಟರ್‌ಗಳ ಲ್ಯಾಂಡಿಂಗ್‌ಗೂ ತೊಂದರೆ ಉಂಟಾಗಿದೆ. ಹೀಗಾಗಿ ನಾಪತ್ತೆಯಾದವರ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆಗೆ ಸವಾಲು ಎದುರಾಗಿದೆ.
ಚೀನಾದಲ್ಲೂ ರಕ್ಷಣಾ ಕಾರ್ಯಾಚರಣೆ
ಟಿಬೆಟ್ ಭಾಗದಲ್ಲಿ ನಾಪತ್ತೆಯಾಗಿರುವವರನ್ನು ಪತ್ತೆಹಚ್ಚಲು ಎಲ್ಲ ಪ್ರಯತ್ನಗಳನ್ನು ನಡೆಸುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸೂಚಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳಿಂದ ಉಂಟಾಗಬಹುದಾದ ಅಪಾಯಗಳನ್ನು ಕಡಿಮೆ ಮಾಡಲು ಮುನ್ನೆಚ್ಚರಿಕೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವಂತೆಯೂ ಅವರು ಸೂಚಿಸಿದ್ದಾರೆ.
ಸದ್ಯ ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವವರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಪರಿಸ್ಥಿತಿಯ ಮೇಲೆ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದಾರೆ.