ಥೈಲ್ಯಾಂಡ್: ಪ್ರವಾಸಿಗರ ಸ್ವರ್ಗ ಎಂದೇ ಖ್ಯಾತಿ ಪಡೆದಿರುವ ಥೈಲ್ಯಾಂಡ್ನ ಫುಕೆಟ್ ದ್ವೀಪದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸೋಮವಾರ ಮುಂಜಾನೆ ವಾಣಿಜ್ಯ ಕಟ್ಟಡವೊಂದರಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಕಟ್ಟಡಗಳಿಗೂ ವ್ಯಾಪಿಸಿದ್ದು, ಘಟನೆಯಲ್ಲಿ 11 ಮಂದಿ ಸಜೀವ ದಹನವಾಗಿದ್ದಾರೆ. ಅಲ್ಲದೆ, 16 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮುಂಜಾನೆ 3.17ಕ್ಕೆ ಕಾಣಿಸಿಕೊಂಡ ಬೆಂಕಿ
ಥೈಲ್ಯಾಂಡ್ನ ದಕ್ಷಿಣ ಭಾಗದಲ್ಲಿರುವ ಜನಪ್ರಿಯ ಪ್ರವಾಸಿ ತಾಣ ಫುಕೆಟ್ ದ್ವೀಪದ ಪಟಾಂಗ್ ಕಡಲತೀರದ ಸಮೀಪ ಈ ಭೀಕರ ಅಗ್ನಿ ಅವಘಡ ಸಂಭವಿಸಿದೆ. ವಾಹನಗಳನ್ನು ಬಾಡಿಗೆಗೆ ನೀಡುವ ವ್ಯವಹಾರ ನಡೆಸುತ್ತಿದ್ದ ವಾಣಿಜ್ಯ ಕಟ್ಟಡವೊಂದರಲ್ಲಿ ಸೋಮವಾರ ಮುಂಜಾನೆ ಸುಮಾರು 3.17ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ.
ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ ನೋಡನೋಡುತ್ತಿದ್ದಂತೆ ಅಕ್ಕಪಕ್ಕದ ಹಲವು ಕಟ್ಟಡಗಳಿಗೂ ವ್ಯಾಪಿಸಿದೆ. ಮುಂಜಾನೆ ಸಮಯವಾಗಿದ್ದರಿಂದ ಹಲವರು ಕಟ್ಟಡಗಳ ಒಳಗೆ ನಿದ್ರಿಸುತ್ತಿದ್ದರು ಎನ್ನಲಾಗಿದೆ. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯ ಮಾಹಿತಿ ಲಭಿಸುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ವ್ಯಾಪಿಸಿದ್ದ ಕಟ್ಟಡಗಳ ಸುತ್ತಮುತ್ತ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.
ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣ
ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಹರಸಾಹಸ ಪಟ್ಟ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಥಾಯ್ಲೆಂಡ್ ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ ಅಷ್ಟರಲ್ಲಾಗಲೇ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 11 ಮಂದಿ ಮೃತಪಟ್ಟಿದ್ದಾರೆ. ಕಟ್ಟಡದೊಳಗೆ ಸಿಲುಕಿದ್ದವರನ್ನು ರಕ್ಷಿಸುವ ಕಾರ್ಯಾಚರಣೆ ವೇಳೆ ಹಲವರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಈ ದುರಂತದಲ್ಲಿ ಒಟ್ಟು 16 ಜನರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಕಿಯ ತೀವ್ರತೆಯಿಂದ ಕಟ್ಟಡಕ್ಕೆ ಭಾರೀ ಹಾನಿಯಾಗಿದೆ. ಸುತ್ತಮುತ್ತಲಿನ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿದ್ದರಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿತ್ತು.
ಮೃತಪಟ್ಟವರಲ್ಲಿ ವಿದೇಶಿ ಪ್ರವಾಸಿಗರಿಲ್ಲ
ಈ ಅಗ್ನಿ ದುರಂತದಲ್ಲಿ ಸ್ಥಳೀಯರಿಗೇ ಹೆಚ್ಚಿನ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿರುವ 16 ಮಂದಿಯಲ್ಲಿ 15 ಜನರು ಥೈಲ್ಯಾಂಡ್ ಪ್ರಜೆಗಳಾಗಿದ್ದರೆ, ಮತ್ತೊಬ್ಬರು ಮ್ಯಾನ್ಮಾರ್ ಮೂಲದವರಾಗಿದ್ದಾರೆ.
ಈ ಘಟನೆಯಲ್ಲಿ ಮೃತಪಟ್ಟವರಲ್ಲಿ ಅಥವಾ ಗಾಯಗೊಂಡವರಲ್ಲಿ ಯಾವುದೇ ವಿದೇಶಿ ಪ್ರವಾಸಿಗರು ಇಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸ್ಥಳೀಯ ನಿವಾಸಿಗಳು ಹಾಗೂ ಕಾರ್ಮಿಕರು ಈ ಅವಘಡಕ್ಕೆ ತುತ್ತಾಗಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಮೃತರ ಗುರುತು ಹಾಗೂ ದುರಂತಕ್ಕೆ ಸಂಬಂಧಿಸಿದ ಇತರ ವಿವರಗಳ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಅಗ್ನಿ ಅವಘಡಕ್ಕೆ ಕಾರಣವೇನು?
ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ವಿದ್ಯುತ್ ಅವಘಡ ಅಥವಾ ಇತರ ಕಾರಣಗಳಿಂದ ಬೆಂಕಿ ಕಾಣಿಸಿಕೊಂಡಿದೆಯೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಅಗ್ನಿಶಾಮಕ ಹಾಗೂ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.





