ರಿಯಾದ್ ಅ.11: ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ಕ್ಷಿಪಣಿ ದಾಳಿ ಮಧ್ಯಪ್ರಾಚ್ಯದಲ್ಲಿ ಆತಂಕ ಸೃಷ್ಟಿಸಿದೆ. ದಾಳಿಯಲ್ಲಿ 12 ಮಂದಿ ಮೃತಪಟ್ಟಿದ್ದು, 309 ಜನರು ಗಾಯಗೊಂಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದ ಸೌದಿ ಅರೇಬಿಯಾ ಮತ್ತು ಯೆಮನ್‌ನ ಹೌತಿ ಬಂಡುಕೋರರ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಆತಂಕ ಎದುರಾಗಿದೆ.
ಹೌತಿ ಬಂಡುಕೋರರ ಮೇಲೆ ಆರೋಪ
ಇರಾನ್ ಬೆಂಬಲಿತ ಹೌತಿ ಬಂಡುಕೋರರು ದಾಳಿ ನಡೆಸಿದ್ದಾರೆ ಎಂದು ಸೌದಿ ನೇತೃತ್ವದ ಒಕ್ಕೂಟ ಆರೋಪಿಸಿದೆ. ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದೇಶೀಯ ವಿಮಾನಗಳ ಟರ್ಮಿನಲ್ 3 ಮತ್ತು 4 ಇರುವ ಪ್ರದೇಶವನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.
ಮೃತಪಟ್ಟವರಲ್ಲಿ ನಾಲ್ವರು ಸೌದಿ ಪ್ರಜೆಗಳು, ಇಬ್ಬರು ಬಾಂಗ್ಲಾದೇಶದ ನಾಗರಿಕರು ಹಾಗೂ ಅಮೆರಿಕ, ಈಜಿಪ್ಟ್, ಜೋರ್ಡಾನ್, ಸಿರಿಯಾ, ಪ್ಯಾಲೆಸ್ಟೈನ್ ಮತ್ತು ಸುಡಾನ್‌ನ ತಲಾ ಒಬ್ಬರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಈ ನಿರ್ದಿಷ್ಟ ದಾಳಿಯ ಹೊಣೆಯನ್ನು ಹೌತಿಗಳು ಅಧಿಕೃತವಾಗಿ ಒಪ್ಪಿಕೊಂಡಿಲ್ಲ ಎಂದು ವರದಿಗಳು ತಿಳಿಸಿದೆ.
ಹೌತಿಗಳ ವಿರುದ್ಧದ ಕಾರ್ಯಾಚರಣೆಯಲ್ಲಿ ಅಮೆರಿಕ?
ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಂಡಿಸಿದ್ದು, ಹೌತಿ ಬಂಡುಕೋರರ ವಿರುದ್ಧದ ಕಾರ್ಯಾಚರಣೆಯಲ್ಲಿ ಸೌದಿ ಅರೇಬಿಯಾದೊಂದಿಗೆ ಅಮೆರಿಕ ಕೈಜೋಡಿಸುವ ಸಾಧ್ಯತೆಯನ್ನು ಪರಿಶೀಲಿಸುತ್ತಿರುವುದಾಗಿ ತಿಳಿಸಿದ್ದಾರೆ. ಸೌದಿ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಕೂಡ ದಾಳಿಯಲ್ಲಿ ಅಮೆರಿಕದ ಪ್ರಜೆಯೊಬ್ಬರು ಮೃತಪಟ್ಟಿರುವುದನ್ನು ದೃಢಪಡಿಸಿ ಘಟನೆಯನ್ನು ಖಂಡಿಸಿದ್ದಾರೆ. ಆದರೆ, ಅಮೆರಿಕ ನೇರವಾಗಿ ಮಿಲಿಟರಿ ಕಾರ್ಯಾಚರಣೆಯಲ್ಲಿ ಭಾಗವಹಿಸುವ ಕುರಿತು ಅಂತಿಮ ನಿರ್ಧಾರ ಪ್ರಕಟವಾಗಿಲ್ಲ.
ವಿಮಾನ ನಿಲ್ದಾಣದ ಕಾರ್ಯಾಚರಣೆ ಸ್ಥಗಿತ
ದಾಳಿಯ ಬಳಿಕ ಭದ್ರತಾ ಕಾರಣಗಳಿಂದ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಪ್ರವೇಶ ದ್ವಾರಗಳನ್ನು ಬಂದ್ ಮಾಡಿ ಬಿಗಿ ಭದ್ರತೆ ಒದಗಿಸಲಾಗಿದೆ. ಅಮೆರಿಕ, ಬ್ರಿಟನ್, ಜರ್ಮನಿ, ಆಸ್ಟ್ರೇಲಿಯಾ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳು ತಮ್ಮ ನಾಗರಿಕರಿಗೆ ವಿಮಾನ ನಿಲ್ದಾಣಕ್ಕೆ ತೆರಳದಂತೆ ಎಚ್ಚರಿಕೆ ನೀಡಿವೆ.
ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ
ಸೌದಿ ಅರೇಬಿಯಾ ಮತ್ತು ಹೌತಿ ಬಂಡುಕೋರರ ನಡುವಿನ ಸಂಘರ್ಷ ಹಲವು ವರ್ಷಗಳಿಂದ ಮುಂದುವರಿದಿದೆ. 2015ರಲ್ಲಿ ಯೆಮನ್‌ನ ಅಂತರರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಸರ್ಕಾರಕ್ಕೆ ಬೆಂಬಲವಾಗಿ ಸೌದಿ ನೇತೃತ್ವದ ಒಕ್ಕೂಟ ಯುದ್ಧದಲ್ಲಿ ಮಧ್ಯಪ್ರವೇಶಿಸಿತ್ತು. 2022ರ ಕದನ ವಿರಾಮದ ಬಳಿಕ ಸಂಘರ್ಷದ ತೀವ್ರತೆ ತಗ್ಗಿದ್ದರೂ, ಇತ್ತೀಚಿನ ಬೆಳವಣಿಗೆಗಳು ಮತ್ತೆ ಉದ್ವಿಗ್ನತೆಯನ್ನು ಹೆಚ್ಚಿಸಿವೆ.
ವಿಮಾನ ನಿಲ್ದಾಣದಂತಹ ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆದಿರುವ ವರದಿಗಳು ಪ್ರಾದೇಶಿಕ ಭದ್ರತೆಯ ಬಗ್ಗೆ ಕಳವಳ ಮೂಡಿಸಿವೆ. ಸಂಘರ್ಷ ಮತ್ತಷ್ಟು ವಿಸ್ತರಿಸಿದರೆ ತೈಲ ಸಾಗಣೆ, ಜಾಗತಿಕ ವ್ಯಾಪಾರ ಮತ್ತು ಅಂತಾರಾಷ್ಟ್ರೀಯ ವಿಮಾನಯಾನದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ.





