ನವದೆಹಲಿ: ಉತ್ತರ ಕರ್ನಾಟಕ ಜನರ ದಶಕಗಳ ಬೇಡಿಕೆಯಾದ ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಈ ನೂತನ ರೈಲು ಮಾರ್ಗದ ವಿಸ್ತೃತ ಯೋಜನಾ ವರದಿ (DPR) ಇನ್ನೈದು ತಿಂಗಳಲ್ಲಿ ಅಂದರೆ 2026ರ ಮೇ ಅಂತ್ಯದೊಳಗೆ ಸಿದ್ಧವಾಗಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.
ಬುಧವಾರ ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಸಚಿವ ಪ್ರಲ್ಹಾದ್ ಜೋಶಿ ಅವರು, ಈ ಭಾಗದ ರೈಲ್ವೆ ಯೋಜನೆಯ ಅಗತ್ಯತೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ಭೇಟಿಯ ಬೆನ್ನಲ್ಲೇ ರೈಲ್ವೆ ಸಚಿವ ಶ್ವಿನಿ ವೈಷ್ಣವ್, ಜೋಶಿ ಅವರಿಗೆ ಪತ್ರ ಬರೆದು ಯೋಜನೆಯ ಪ್ರಗತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ಈ ಮಾರ್ಗದ ಪ್ರಾಥಮಿಕ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ತಾಂತ್ರಿಕ ಮತ್ತು ಆರ್ಥಿಕ ಸಾಧಕ-ಬಾಧಕಗಳನ್ನು ಒಳಗೊಂಡ ಡಿಪಿಆರ್ ತಯಾರಿಕೆ ಪ್ರಕ್ರಿಯೆ ಚುರುಕುಗೊಂಡಿದೆ ಎಂದು ತಿಳಿಸಿದ್ದಾರೆ.
ಈ ನೂತನ ರೈಲು ಮಾರ್ಗದ ಕುರಿತು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಮತ್ತು ಬಾಗಲಕೋಟೆ ಸಂಸದ ಪಿಸಿ ಗದ್ದಿಗೌಡರ್ ಅವರು ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಪತ್ರ ಬರೆದು ನಿರಂತರ ಒತ್ತಾಯಿಸಿದ್ದರು. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸಂಪರ್ಕ ಕೊಂಡಿಯಾಗಿರುವ ಈ ಮಾರ್ಗವು ಸಾರ್ವಜನಿಕರಿಗೆ ಮತ್ತು ರೈತರಿಗೆ ಎಷ್ಟು ಅನುಕೂಲಕರವಾಗಿದೆ ಎಂಬುದನ್ನು ಜೋಶಿ ಅವರು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.
ಈ ರೈಲ್ವೆ ಮಾರ್ಗವು ಕೇವಲ ಸಂಚಾರಕ್ಕೆ ಮಾತ್ರವಲ್ಲದೆ, ಉತ್ತರ ಕರ್ನಾಟಕದ ವಾಣಿಜ್ಯೋದ್ಯಮದ ಅಭಿವೃದ್ಧಿಗೂ ಪೂರಕವಾಗಲಿದೆ. ಕೃಷಿ ಉತ್ಪನ್ನಗಳ ಸಾಗಣೆ ಮತ್ತು ಕೈಗಾರಿಕಾ ವಲಯದ ಬೆಳವಣಿಗೆಗೆ ಈ ಹೊಸ ಹಳಿಗಳು ಭದ್ರ ಬುನಾದಿ ಹಾಕಲಿವೆ. ಕರ್ನಾಟಕದಲ್ಲಿ ರೈಲ್ವೆ ಜಾಲವನ್ನು ವಿಸ್ತರಿಸುವ ಮೂಲಕ ಪ್ರಾದೇಶಿಕ ಅಸಮತೋಲನವನ್ನು ಹೋಗಲಾಡಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಪ್ರಲ್ಹಾದ್ ಜೋಶಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಯೋಜನೆಗೆ ಸಮ್ಮತಿ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಪ್ರಲ್ಹಾದ್ ಜೋಶಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.





