ಚಿಕ್ಕಮಗಳೂರು: ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶುಕ್ರವಾರ (ಆಗಸ್ಟ್ 8, 2025) ಕಲುಷಿತ ಆಹಾರ ಸೇವನೆಯಿಂದ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣದಲ್ಲಿ ನಡೆದಿದೆ.
ಶಾಲೆಯಲ್ಲಿ ಊಟ ಸೇವಿಸಿದ ಕೆಲವೇ ಗಂಟೆಗಳಲ್ಲಿ ಮಕ್ಕಳಿಗೆ ವಾಂತಿ, ಭೇದಿ, ಜ್ವರ ಮತ್ತು ತೀವ್ರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ. ಈ ಘಟನೆಯಿಂದ ಫುಡ್ ಪಾಯ್ಸನಿಂಗ್ ಆಗಿರುವ ಶಂಕೆ ವ್ಯಕ್ತವಾಗಿದೆ.
ಅಸ್ವಸ್ಥರಾದ ಎಲ್ಲಾ ಮಕ್ಕಳನ್ನು ತಕ್ಷಣವೇ ಚಿಕ್ಕಮಗಳೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯ ವೈದ್ಯರು ತುರ್ತು ಚಿಕಿತ್ಸೆ ಒದಗಿಸಿದ್ದು, ಎಲ್ಲಾ ಮಕ್ಕಳ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಚಿಕಿತ್ಸೆಯಿಂದ ಮಕ್ಕಳು ಚೇತರಿಸಿಕೊಂಡಿದ್ದಾರೆ.
ವರಮಹಾಲಕ್ಷ್ಮಿ ಹಬ್ಬದ ರಜೆಯ ಹಿನ್ನೆಲೆಯಲ್ಲಿ ಶಾಲೆಯ ಹಾಸ್ಟೆಲ್ ಸಿಬ್ಬಂದಿಯ ಬಹುತೇಕರು ರಜೆಯ ಮೇಲೆ ತೆರಳಿದ್ದರು ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಆಹಾರ ತಯಾರಿಕೆಯಲ್ಲಿ ಸೂಕ್ತ ನಿಗಾ ವಹಿಸದಿರುವುದೇ ಈ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
ಈ ಘಟನೆಯಿಂದ ಕೋಪಗೊಂಡಿರುವ ದಲಿತ ಸಂಘಟನೆಗಳು ಶಾಲೆಯ ಪ್ರಾಂಶುಪಾಲರು ಮತ್ತು ವಾರ್ಡನ್ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಒತ್ತಾಯಿಸಿವೆ. “ಮಕ್ಕಳ ಆರೋಗ್ಯದ ಜೊತೆಗೆ ಚೆಲ್ಲಾಟವಾಡುವವರ ವಿರುದ್ಧ ಕಾನೂನಾತ್ಮಕ ಕ್ರಮ ಅಗತ್ಯವಾಗಿದೆ,” ಎಂದು ಸಂಘಟನೆಯ ಮುಖಂಡರೊಬ್ಬರು ತಿಳಿಸಿದ್ದಾರೆ.