ಸರ್ಕಾರವನ್ನು ಹೆದರಿಸುವ ಕೆಲಸ ಮಾಡಬಾರದು, ಪ್ರತಿಭಟನೆ ವಾಪಸ್ ಪಡೆಯಿರಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಮನವಿ

Untitled Design 2026 11 26T125704.665

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಸರ್ಕಾರವನ್ನು ಹೆದರಿಸುವ ಕೆಲಸ ಮಾಡಬಾರದು, ಹಠ ಬಿಟ್ಟು ತಾಳ್ಮೆಯಿಂದ ಹೋರಾಟವನ್ನು ವಾಪಸ್ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಹಾಗೂ ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಶುಕ್ರವಾರ ಸಂಜೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವುದಾಗಿಯೂ ಭರವಸೆ ನೀಡಿದ್ದಾರೆ.

ಸಂವಿಧಾನ ದಿನಾಚರಣೆಯ ಹಿನ್ನೆಲೆ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಾಗೂ ಅವರ ಬೇಡಿಕೆಗಳ ಕುರಿತು ಪ್ರತಿಕ್ರಿಯಿಸಿದರು.

ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿಲ್ಲ. ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಹಣಕಾಸು ಇಲಾಖೆಯೊಂದಿಗೂ ಸಮಾಲೋಚನೆ ನಡೆಯುತ್ತಿದೆ. ಹೀಗಿರುವಾಗ ಪ್ರತಿಭಟನೆಯನ್ನು ಮುಂದುವರಿಸುವ ಬದಲು ಸರ್ಕಾರದ ಮೇಲೆ ವಿಶ್ವಾಸವಿಟ್ಟು ತಾಳ್ಮೆಯಿಂದ ಇರಬೇಕು ಎಂದು ಅವರು ಮನವಿ ಮಾಡಿದರು.

ಹಠ ಬಿಡಿ, ಪ್ರತಿಭಟನೆ ವಾಪಸ್ ಪಡೆಯಿರಿ: ಡಿಕೆಶಿ ಮನವಿ

ಆಶಾ ಕಾರ್ಯಕರ್ತೆಯರ ಹೋರಾಟದ ಬಗ್ಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಹೆಣ್ಣುಮಕ್ಕಳ ಸಮಸ್ಯೆಗಳು ಹಾಗೂ ಅವರ ಕುಟುಂಬದ ಜವಾಬ್ದಾರಿಗಳ ಬಗ್ಗೆ ತಮಗೆ ಅರಿವಿದೆ ಎಂದರು. ಹೆಣ್ಣುಮಕ್ಕಳು ಮನೆಯ ಕಣ್ಣು ಎಂಬುದು ನನಗೆ ಗೊತ್ತಿದೆ. ಅವರ ಬಗ್ಗೆ ಸರ್ಕಾರಕ್ಕೆ ಗೌರವವಿದೆ. ಹೀಗಾಗಿ ಇಷ್ಟೊಂದು ಹಠ ಹಿಡಿಯುವ ಅಗತ್ಯವಿಲ್ಲ. ದಯವಿಟ್ಟು ಪ್ರತಿಷ್ಠೆ ಬಿಟ್ಟು ಪ್ರತಿಭಟನೆಯನ್ನು ವಾಪಸ್ ಪಡೆಯಿರಿ ಎಂದು ಮನವಿ ಮಾಡಿದರು.

 ಶುಕ್ರವಾರ ಸಂಜೆ ಆಶಾಗಳ ಜೊತೆ ಮಾತುಕತೆ

ಆಶಾ ಕಾರ್ಯಕರ್ತೆಯರನ್ನು ಶುಕ್ರವಾರ ಸಂಜೆ ಭೇಟಿ ಮಾಡುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ತಾವು ಬೆಂಗಳೂರಿಗೆ ಮರಳಿದ ಬಳಿಕ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ಈಗಾಗಲೇ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಭರವಸೆ ನೀಡಿದ್ದಾರೆ.

“ನಮಗೆ ಎಲ್ಲರೂ ಬೇಕು. ಆಶಾ ಕಾರ್ಯಕರ್ತೆಯರು ನಮ್ಮ ಮೇಲೆ ವಿಶ್ವಾಸ ಇಡಬೇಕು. ಅವರ ಸಮಸ್ಯೆಗಳನ್ನು ನಾವು ಪರಿಹರಿಸಿಯೇ ಪರಿಹರಿಸುತ್ತೇವೆ” ಎಂಬ ವಿಶ್ವಾಸದ ಮಾತುಗಳನ್ನು ಹೇಳಿದ್ದಾರೆ.

ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಿದೆ. ಮುಂದೆಯೂ ನೀಡಿದ ಭರವಸೆಗಳನ್ನು ಈಡೇರಿಸಲಿದೆ ಎಂದು ತಿಳಿಸಿದ ಅವರು, ಆಶಾ ಕಾರ್ಯಕರ್ತೆಯರ ಬೇಡಿಕೆಗಳ ವಿಚಾರದಲ್ಲಿಯೂ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂಬ ಸಂದೇಶ ನೀಡಿದ್ದಾರೆ.

ಇದೇ ವೇಳೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಪ್ರತಿಭಟನೆಯ ವಿಚಾರದಲ್ಲಿ ಖಾದರ್ ಹಾಗೂ ನರೇಂದ್ರ ಸ್ವಾಮಿ ನೀಡಿರುವ ಹೇಳಿಕೆಗಳು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ನಮಗೆ ಎಲ್ಲರೂ ಮುಖ್ಯ. ಆಶಾ ಕಾರ್ಯಕರ್ತೆಯರ ಸಮಸ್ಯೆ ಪರಿಹಾರವಾಗಬೇಕು ಎಂಬುದೇ ಸರ್ಕಾರದ ಉದ್ದೇಶ ಎಂದು ಸ್ಪಷ್ಟಪಡಿಸಿದ್ದಾರೆ.

ಆನೆಗಳ ಹಾವಳಿ ವಿಚಾರಕ್ಕೂ ಡಿಕೆಶಿ ಪ್ರತಿಕ್ರಿಯೆ

ಇದೇ ಸಂದರ್ಭದಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿ ಹಾಗೂ ಆನೆಗಳ ನಿಯಂತ್ರಣದ ಕುರಿತು ಕೇಳಿದ ಪ್ರಶ್ನೆಗೂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಆನೆಗಳನ್ನು ಅಷ್ಟು ಸುಲಭವಾಗಿ ನಿಯಂತ್ರಿಸಲು ಸಾಧ್ಯವಿಲ್ಲ. ಮನೆ ಹಾಗೂ ತೋಟಗಳಿಗೆ ಆನೆಗಳು ನುಗ್ಗುತ್ತಿರುವುದರಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಶಾಸಕರು ತಮ್ಮ ಕ್ಷೇತ್ರದ ಜನರ ಪರವಾಗಿ ಬೇಡಿಕೆ ಸಲ್ಲಿಸುವುದು ತಪ್ಪಲ್ಲ ಎಂದು ಹೇಳಿದ್ದಾರೆ.

ಆನೆಗಳ ಸಮಸ್ಯೆ ಕುರಿತು ಏಕಾಏಕಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಈ ಬಗ್ಗೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.

Exit mobile version