ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ನಿರಾಸೆ ಮೂಡಿಸಿದೆ. ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಲಿಖಿತ ಭರವಸೆ ಅಥವಾ ಸಹಿ ಮಾಡಿದ ಆದೇಶದ ಪ್ರತಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಸರ್ಕಾರದ ಮೇಲೆ ನಂಬಿಕೆ ಇಟ್ಟು ಪ್ರತಿಭಟನೆಯನ್ನು ತಕ್ಷಣ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ.
ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮತ್ತು ಬೇಡಿಕೆಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಈಗಾಗಲೇ ಸರ್ಕಾರದ ಪರವಾಗಿ ಭರವಸೆ ನೀಡಲಾಗಿದೆ. ಅದನ್ನು ನಂಬಬೇಕು. ಆದರೆ ಸಹಿ ಮಾಡಿ ಲಿಖಿತ ರೂಪದಲ್ಲಿ ಭರವಸೆ ನೀಡುವಂತೆ ಕೇಳಿದರೆ ಅದು ಸಾಧ್ಯವಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.
‘ನನ್ನ ಭರವಸೆ ನಂಬಿ, ಮನೆಗಳಿಗೆ ತೆರಳಿ’
ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರಿಸುವ ಬದಲು ತಮ್ಮ ಕರ್ತವ್ಯಕ್ಕೆ ಮರಳಬೇಕು ಎಂದು ಡಿಕೆಶಿ ಸಲಹೆ ನೀಡಿದ್ದಾರೆ. ಸರ್ಕಾರದ ಮೇಲೆ ವಿಶ್ವಾಸವಿಡಬೇಕು. ಈಗಾಗಲೇ ನೀಡಿರುವ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ಲಿಖಿತ ಭರವಸೆ ಅಥವಾ ಆದೇಶದ ಪ್ರತಿ ನೀಡುವಂತೆ ಪಟ್ಟು ಹಿಡಿದರೆ ಅದಕ್ಕೆ ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಇಂದು ಸಂಜೆ ಸರ್ಕಾರದೊಂದಿಗೆ ಸಭೆ ನಡೆಯಬಹುದು ಅಥವಾ ಬೇಡಿಕೆಗಳ ಕುರಿತು ಲಿಖಿತ ಭರವಸೆ ಸಿಗಬಹುದು ಎಂದು ನಿರೀಕ್ಷಿಸಿದ್ದ ಕಾರ್ಯಕರ್ತೆಯರಿಗೆ ಡಿಕೆಶಿ ಹೇಳಿಕೆ ನಿರಾಸೆ ಮೂಡಿಸಿದೆ. ಪ್ರತಿಭಟನೆ ಹಿಂಪಡೆದು ಮನೆಗಳಿಗೆ ತೆರಳುವಂತೆ ಅವರು ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧವೂ ಹೋರಾಟ ನಡೆಸಿ
ಆಶಾ ಕಾರ್ಯಕರ್ತೆಯರ ಬೇಡಿಕೆಗಳ ವಿಚಾರದಲ್ಲಿ ರಾಜ್ಯ ಸರ್ಕಾರದ ಜೊತೆಗೆ ಕೇಂದ್ರ ಸರ್ಕಾರವನ್ನೂ ಒತ್ತಾಯಿಸಬೇಕು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಇನ್ನಷ್ಟು ಸೌಲಭ್ಯಗಳು ದೊರೆಯಬೇಕಿದೆ. ಹೀಗಾಗಿ ಕೇಂದ್ರದ ವಿರುದ್ಧವೂ ಹೋರಾಟ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಆಶಾ ಕಾರ್ಯಕರ್ತೆಯರು ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ ಜಾರಿಗೆ ಬಂದ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.
ಪ್ರತಿಭಟನೆ ಹಿಂಪಡೆಯಲು ಕೆಲವರಿಂದ ಕರೆ
ಇದೇ ವೇಳೆ, ಕೆಲವು ಆಶಾ ಕಾರ್ಯಕರ್ತೆಯರು ತಮಗೆ ಕರೆ ಮಾಡಿ ಪ್ರತಿಭಟನೆ ಹಿಂಪಡೆಯುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಡಿಕೆಶಿ ತಿಳಿಸಿದ್ದಾರೆ. ‘ನಿಮ್ಮ ಮೇಲೆ ನಂಬಿಕೆಯಿದೆ, ನಾವು ಸೇವೆ ಮಾಡಲು ಸಿದ್ಧರಿದ್ದೇವೆ. ನಮ್ಮನ್ನು ವಾಪಸ್ ಕಳುಹಿಸಿ’ ಎಂದು ಕೆಲವರು ಹೇಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕಾರ್ಯಕರ್ತೆಯರ ನಡುವೆ ಭಿನ್ನಾಭಿಪ್ರಾಯ ಮೂಡಬಾರದು ಎಂಬ ಕಾರಣಕ್ಕೆ ಈ ವಿಚಾರದಲ್ಲಿ ತಾವು ಈವರೆಗೆ ಯಾವುದೇ ಹೇಳಿಕೆ ನೀಡಿರಲಿಲ್ಲ ಎಂದೂ ತಿಳಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿರುವ ಎಲ್ಲ ಕಾರ್ಯಕರ್ತೆಯರು ಒಗ್ಗಟ್ಟಿನಿಂದ ನಿರ್ಧಾರ ಕೈಗೊಂಡು ಕರ್ತವ್ಯಕ್ಕೆ ಮರಳಬೇಕು ಎಂಬ ಮನವಿಯನ್ನು ಪುನರುಚ್ಚರಿಸಿದ್ದಾರೆ.
ಕುಮಾರಸ್ವಾಮಿ ಹೇಳಿಕೆಗೆ ಡಿಕೆಶಿ ತಿರುಗೇಟು
ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಜೆಡಿಎಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿತ್ತು ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ‘ನಾವು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುತ್ತೇವೆ. ಅವರಿಂದ ನಾವು ಕಲಿಯಬೇಕಿಲ್ಲ’ ಎಂದು ಹೇಳಿದ್ದಾರೆ.
ಈ ವಿಚಾರದಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಬೇರೆ ಪಕ್ಷಗಳ ನಾಯಕರ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ. ಬಿಜೆಪಿಯವರಿಗೆ ಆಶಾ ಕಾರ್ಯಕರ್ತೆಯರ ಬಗ್ಗೆ ಸಿಟ್ಟು ಇದೆ ಎಂಬ ಮಾತನ್ನೂ ಪ್ರಸ್ತಾಪಿಸಿದ್ದಾರೆ.
